
ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಭೂಮಿ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 223 ರ ಅಡಿಯಲ್ಲಿ ನಡೆಸುತ್ತಿದ್ದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ದೂರುದಾರ ವಿಜಯರಾಘವ ಮರಾಠೆ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ‘ಪ್ರಮಾಣಪತ್ರದಲ್ಲಿನ ದೋಷಗಳನ್ನು ಸರಿಪಡಿಸಲು ದೂರುದಾರರಿಗೆ ಸೂಕ್ತ ಅವಕಾಶ ನೀಡಬೇಕು ಮತ್ತು ಆ ಬಳಿಕ ತನಿಖೆ ಕುರಿತು ನಿಯಮಾನುಸಾರ ತೀರ್ಮಾನ ಕೈಗೊಳ್ಳಬೇಕು’ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಸೂಕ್ತ ಮತ್ತು ಕಾನೂನಾತ್ಮಕ ಕಾರ್ಯವಿಧಾನವನ್ನು ಅನುಸರಿಸುವ ಮೂಲಕ ಪ್ರಕರಣದ ನ್ಯಾಯಿಕ ಪ್ರಕ್ರಿಯೆ
ಮುಂದುವರೆಸುವಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಅರ್ಜಿಯ ವಿಚಾರಣೆ ವೇಳೆ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ‘ಭ್ರಷ್ಟಾಚಾರದಂತಹ ಗಂಭೀರ ಆರೋಪಗಳಲ್ಲಿ ಸಾಕ್ಷ್ಯ ಸಂಗ್ರಹಿಸಲು ಸೂಕ್ತ ತನಿಖೆಯಿಂದ ಮಾತ್ರ ಸಾಧ್ಯ’ ಎಂದು ತಿಳಿಸಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ‘ಈ ಹಿಂದೆ ಲೋಕಾಯುಕ್ತ ಪೊಲೀಸರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರೂ ಅವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್ ವಾದ ಮಂಡಿಸಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ರಾಧಾಬಾಯಿ ಖರ್ಗೆ, ಪುತ್ರರಾದ ಪ್ರಿಯಾಂಕ್ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಹಾಗೂ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ದೂರು ದಾಖಲಾಗಿತ್ತು. ಪರಿಶಿಷ್ಟ ಜಾತಿಯ ಟ್ರಸ್ಟ್ ಎಂಬ ಹೆಸರಿನಲ್ಲಿ ಶೇಕಡ 50 ರಷ್ಟು ರಿಯಾಯಿತಿ ಪಡೆದು, ತಮ್ಮದೇ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಅನುಚಿತ ಲಾಭ ಮಾಡಿಕೊಡಲು ಯತ್ನಿಸಲಾಗಿದೆ ಎಂಬುದು ಪ್ರಮುಖ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: ಖರ್ಗೆ ಟ್ರಸ್ಟ್‌ಗೆ ಭೂಮಿ ಹಂಚಿಕೆ ಕೇಸ್: ಕ್ರಮಕೈಗೊಳ್ಳದ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಶಾಕ್
ಏರೋಸ್ಪೇಸ್ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಯಾವುದೇ ಪೂರ್ವಾನುಭವ ಇಲ್ಲದಿದ್ದರೂ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಮತ್ತು ಬೆಂಗಳೂರಿನ ಬಿಟಿಎಂ ಬಡಾವಣೆಯಲ್ಲಿ 2 ಎಕರೆ ಬಿಡಿಎ ಜಮೀನನ್ನು ಶೇ. 50 ರಷ್ಟು ಸಬ್ಸಿಡಿ ನೀಡಿ ಹಂಚಿಕೆ ಮಾಡಲಾಗಿತ್ತು ಎಂದು ದೂರಲಾಗಿತ್ತು. ಈ ವಿವಾದ ಭುಗಿಲೇಳುತ್ತಿದ್ದಂತೆ ಟ್ರಸ್ಟ್ ಜಮೀನನ್ನು ಮರಳಿ ಸರ್ಕಾರಕ್ಕೆ ಹಿಂತಿರುಗಿಸಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:39 pm, Tue, 8 September 26