BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಭಾರೀ ಭ್ರಷ್ಟಾಚಾರ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ತನಿಖಾ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಇಷ್ಟೇ ಅಲ್ಲದೆ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಭಾರೀ ಭ್ರಷ್ಟಾಚಾರ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ಆರ್ ಅಶೋಕ
Edited By:

Updated on: Feb 03, 2024 | 11:32 AM

ಬೆಂಗಳೂರು, ಫೆಬ್ರವರಿ 3: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (BBMP) ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ (R Ashoka) ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬಿಬಿಎಂಪಿಯನ್ನ ಬ್ರಹ್ಮಾಂಡ ಬ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮವನ್ನು ಬಯಲಿಗೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದ ತನಿಖಾ ಸಮಿತಿ ರಚಿಸಬೇಕು. ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ಕಳಿಸಿ ದಂಡ ಸಮೇತ ತೆರಿಗೆ ವಸೂಲಿ ಮಾಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

ಬಿಬಿಎಂಪಿ ತೆರಿಗೆ ಸಗ್ರಹದಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿ ಗೊತ್ತಾಗಿದ್ದು, ವಲಯಾಧಿಕಾರಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್​​​ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ಗೆ ಶಿಫಾರಸು ಮಾಡಿದ್ದಾರೆ. ಇದರ ಬೆನ್ನಲ್ಲೇ ಆರ್ ಅಶೋಕ ವಾಗ್ದಾಳಿ ನಡೆಸಿದ್ದಾರೆ.

ಬಿಬಿಎಂಪಿ ವಲಯ ವ್ಯಾಪ್ತಿಗಳಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡಗಳಿಗೆ ನೋಟಿಸ್ ನೀಡಿ ತೆರಿಗೆ ಸಂಗ್ರಹಕ್ಕೆ ಮುಂದಾಗುವ ಬಗ್ಗೆ ಮೌದ್ಗಿಲ್ ತೆರಿಗೆ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ ಈ ಸೂಚನೆ ಪಾಲನೆಯಾಗಿಲ್ಲ. ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ. ಪರಿಣಾಮವಾಗಿ ಬಿಬಿಎಂಪಿಗೆ ಬರಬೇಕಾದ ತೆರಿಗೆ ಹಣ ಬಂದಿಲ್ಲ ಎಂದು ಮೌದ್ಗಿಲ್ ಅವರು ಆಯುಕ್ತರ ಬಳಿ ಆರೋಪಿಸಿದ್ದರು. ಹೀಗಾಗಿ ವಲಯಾಧಿಕಾರಿಗಳ ವಿರುದ್ಧವೇ ತನಿಖೆ ನಡೆಸಬೇಕು ಎಂದೂ ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದವರಿಗೆ ಬಿಸಿ ಮುಟ್ಟಿಸಿದ ಬಿಬಿಎಂಪಿ, ಹಲವು ಕಟ್ಟಡಗಳು ಸೀಜ್

ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕಳೆದ ತಿಂಗಳು ಕಾರ್ಯಾಚರಣೆ ಆರಂಭಿಸಿದ್ದ ಬಿಬಿಎಂಪಿ, ಆಸ್ತಿ ತೆರಿಗೆ ಕಟ್ಟದಿರುವ ಕಟ್ಟಡಗಳನ್ನು ಸೀಜ್​ ಮಾಡುವ ಕಾರ್ಯ ಕೈಗೊಂಡಿತ್ತು. ಅದಕ್ಕೂ ಕೆಲವು ದಿನಗಳ ಮೊದಲು, ಹೆಚ್ಚು ಪ್ರಮಾಣದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಕಾರು, ಬೈಕ್​ ಜಪ್ತಿ ಮಾಡಲು ಆರಂಭಿಸಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ