ಬೆಂಗಳೂರು, ಜನವರಿ 24: ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ರೂಪಿಸಲು ಸಚಿವ ಈಶ್ವರ್ ಖಂಡ್ರೆ (Eshwar Kahndre) ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದ ಖಂಡ್ರೆ, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಬಳ್ಳಾರಿ, ಯಾದಗಿರಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಹೆಚ್ಚು ಸಸಿನೆಟ್ಟು ನೀರುಣಿಸಿ, ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸಲು ಸೂಚನೆ ನೀಡಿದ್ದಾರೆ.
ರಸ್ತೆ ಬದಿ ಹೆಚ್ಚು ಗಿಡ ಬೆಳೆಸಲು ಸೂಚನೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹಸಿರು ಹೊದಿಕೆ ಕಡಿಮೆ ಇರುವ ಜಿಲ್ಲೆಗಳಲ್ಲಿನ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳನ್ನು ಗುರುತಿಸಿ ರಸ್ತೆಯ ಎರಡೂ ಬದಿಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು. ಅದಕ್ಕೆ ಈಗಿನಿಂದಲೇ ರಸ್ತೆಗಳನ್ನು ಗುರುತಿಸಿ, ಕಾರ್ಯಯೋಜನೆ ರೂಪಿಸುವಂತೆ ಮತ್ತು ನರ್ಸರಿಗಳಲ್ಲಿ ಎತ್ತರದ ಗಿಡ ಬೆಳೆಸಲು ಆದೇಶಿಸಿದ್ದಾರೆ.
ಇದನ್ನೂ ಓದಿ: ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಬಗ್ಗೆ ಚರ್ಚೆ; ಸಚಿವ ಶಿವರಾಜ ತಂಗಡಗಿ
ಅರಣ್ಯ ಇಲಾಖೆಯ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗದ ಎಲ್ಲ ನರ್ಸರಿಗಳಲ್ಲಿ ಸ್ಥಳೀಯ ಗಿಡಗಳನ್ನು ಬೆಳೆಸಲು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಎತ್ತರದ ಸಸಿಗಳನ್ನು ಬೆಳೆಸಲು ಕ್ರಮವಹಿಸುವುದು. ಇಂದು ಇಡೀ ಜಗತ್ತು ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸಮಸ್ಯೆ ಎದುರಿಸುತ್ತಿದೆ. ವೃಕ್ಷ ಸಂಪತ್ತು ಸಂರಕ್ಷಿಸುವ ಜವಾಬ್ದಾರಿ ಹೊತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ಪೀಳಿಗೆಗೆ ಆರೋಗ್ಯ ಪೂರ್ಣ ಭೂಮಿಯನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಸಫಾರಿ ಹೋಗುವವರಿಗೆ ಗುಡ್ನ್ಯೂಸ್: ಸಿಂಹ, ಹುಲಿ ಜೊತೆಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಆರಂಭ
ಇನ್ನು ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್ ಮಾಲ್ಕಡೆ ಮತ್ತು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.