ಬಿಬಿಎಂಪಿ ಚುನಾವಣೆಗೂ ಮುನ್ನ ಬಾಕಿ ಯೋಜನೆಗಳಿಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಮನವಿ

| Updated By: ಗಣಪತಿ ಶರ್ಮ

Updated on: Aug 16, 2023 | 6:26 PM

CM Siddarmaiah held a meeting with Congress legislators; ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ನಗರಕ್ಕೆ ಸಂಬಂಧಿಸಿದ ಬಾಕಿ ಇರುವ ಯೋಜನೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಕುಡಿಯುವ ನೀರು ಮತ್ತು ಘನತ್ಯಾಜ್ಯ ನಿರ್ವಹಣೆ ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಬಿಎಂಪಿ ಚುನಾವಣೆಗೂ ಮುನ್ನ ಬಾಕಿ ಯೋಜನೆಗಳಿಗೆ ಅನುಮತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಮನವಿ
ಬೆಂಗಳೂರಿನ ಕಾಂಗ್ರೆಸ್ ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು
Follow us on

ಬೆಂಗಳೂರು, ಆಗಸ್ಟ್ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಬುಧವಾರ ಹೇಳಿದರು. ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನ ಶಾಸಕರು ನಗರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು ಎಂದು ತಿಳಿಸಿದರು.

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ನಗರಕ್ಕೆ ಸಂಬಂಧಿಸಿದ ಬಾಕಿ ಇರುವ ಯೋಜನೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಕುಡಿಯುವ ನೀರು ಮತ್ತು ಘನತ್ಯಾಜ್ಯ ನಿರ್ವಹಣೆ ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಬಿಎಂಪಿ ಗುತ್ತಿಗೆದಾರರ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ, ವಿಶೇಷ ತನಿಖಾ ತಂಡ ಶೀಘ್ರದಲ್ಲೇ ವರದಿ ಸಲ್ಲಿಸಲಿದೆ ಎಂದು ಸಚಿವರು ಹೇಳಿದರು.

ಬಿಬಿಎಂಪಿ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಗೆ ಸರಕಾರ ಎಸ್‌ಐಟಿ ರಚಿಸಿತ್ತು. 30 ದಿನಗಳಲ್ಲಿ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದ್ದು, ಈಗಾಗಲೇ 10 ದಿನಗಳು ಕಳೆದಿದ್ದು, ಮುಂದಿನ 20 ದಿನಗಳಲ್ಲಿ ವರದಿ ಪಡೆಯುತ್ತೇವೆ. ವರದಿ ಸಲ್ಲಿಕೆಯಾದ ನಂತರ, ಪ್ರಾಮಾಣಿಕವಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಹಣ ಸಿಗಲಿದೆ ಎಂದು ರೆಡ್ಡಿ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಬಿಬಿಎಂಪಿ ಕಾಮಗಾರಿಗಳಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಗೆ ಸರ್ಕಾರ ನಾಲ್ಕು ತಂಡಗಳನ್ನು ರಚಿಸಿತ್ತು. ಈ ಮಧ್ಯೆ, ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಕಾಮಗಾರಿ ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಕೆಎಸ್​ಆರ್​ಟಿಸಿ

ಬೆಂಗಳೂರಿನ ಸಚಿವರು, ಶಾಸಕರು ಮತ್ತು ಸಂಸದರ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸಚಿವರ ವಿರುದ್ಧ ಹಲವು ಶಾಸಕರು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ, ಪ್ರದೇಶಾಭಿವೃದ್ಧಿ ಅನುದಾನದ ಕೊರತೆ ಎದುರಾಗಿದೆ. ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಬೇಕಿರುವುದರಿಂದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡುವುದು ಈ ವರ್ಷ ಕಷ್ಟಸಾಧ್ಯ ಎಂದು ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಗಳ ಶಾಸಕರ ಜತೆ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ