
ಬೆಂಗಳೂರು, ನವೆಂಬರ್ 11: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಆದರೆ ಅದೇ ದಿನ ಸಿಎ ವಿದ್ಯಾರ್ಥಿಗಳಿಗೆ ಪರೀಕ್ಷೆಯೂ ಇರುವುದರಿಂದ, ಅವರ ಸಂಚಾರಕ್ಕೆ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.
ನವೆಂಬರ್ 13ರಂದು ಮಧ್ಯಾಹ್ನ 1 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಿಗದಿಯಾಗಿದೆ. ಅದೇ ದಿನ ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಿಎ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆ. ಉದ್ಘಾಟನೆಯ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಅಥವಾ ದಟ್ಟಣೆ ಉಂಟಾದರೆ ಪರೀಕ್ಷಾರ್ಥಿಗಳು ಕೇಂದ್ರ ತಲುಪಲು ತೊಂದರೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ಪ್ರಧಾನಿ ಕಚೇರಿ ನೀಡಿರುವ ವೇಳಾಪಟ್ಟಿಯ ಪ್ರಕಾರವೇ ಕಾರ್ಯಕ್ರಮ ರೂಪಿಸಲಾಗಿದೆ ಎಂದಿದ್ದಾರೆ. ಪ್ರಧಾನಿ ಕಾರ್ಯಾಲಯದಿಂದ ವೇಳಾಪಟ್ಟಿ ನಿಗದಿಯಾಗಿರುವುದರಿಂದ ಅದನ್ನು ಬದಲಿಸುವುದು ಕಷ್ಟ ಎಂದು ಅವರು ಹೇಳಿದ್ದಾರೆ. ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ತೆರಳಲು ಪರ್ಯಾಯ ಮಾರ್ಗಗಳ ಬಗ್ಗೆ ಪೊಲೀಸರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೋಗುವುದು ಕಷ್ಟವಾಗುತ್ತದೆ ಎಂದಾದರೆ, ಆ ವಿಷಯವನ್ನು ಪ್ರಧಾನಿ ಕಚೇರಿಯ ಗಮನಕ್ಕೆ ತಂದು ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ಪಿಂಕ್ ಲೈನ್‌ನ ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಸುಮಾರು 7.5 ಕಿ.ಮೀ. ಎತ್ತರಿಸಿದ ಎಲಿವೇಟೆಡ್ ಕಾರಿಡಾರ್ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಇರಲಿದೆ.
ಇದನ್ನೂ ಓದಿ: ನಮ್ಮ ಮೆಟ್ರೋ ಪಿಂಕ್ ಲೈನ್: ಪೀಕ್ ಅವರ್‌ನಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸಂಚಾರ, ಆರಂಭದಲ್ಲಿ ನಾಲ್ಕು ರೈಲುಗಳ ನಿಯೋಜನೆ
ಮೆಟ್ರೋ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದ ಬಗ್ಗೆಯೂ ಸಚಿವರು ಮಾತನಾಡಿದ್ದಾರೆ. ಪ್ರಸ್ತುತ ಹಂತದಲ್ಲಿ ಟಿಕೆಟ್ ದರಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ