AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 1 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರ ಹೆಚ್ಚಳದ ಸುದ್ದಿ ಸುಳ್ಳು: ಡಿಕೆ ಶಿವಕುಮಾರ್

ಬಿಬಿಎಂಪಿ ಆಸ್ತಿ ತೆರಿಗೆ ದರ ಏಪ್ರಿಲ್ 1 ರಿಂದ ಹೆಚ್ಚುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಏಪ್ರಿಲ್ 1 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರ ಹೆಚ್ಚಳದ ಸುದ್ದಿ ಸುಳ್ಳು: ಡಿಕೆ ಶಿವಕುಮಾರ್
ಏಪ್ರಿಲ್ 1 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರ ಹೆಚ್ಚಳದ ಸುದ್ದಿ ಸುಳ್ಳು ಎಂದ ಡಿಕೆ ಶಿವಕುಮಾರ್
Rakesh Nayak Manchi
|

Updated on: Mar 25, 2024 | 10:16 PM

Share

ಬೆಂಗಳೂರು, ಮಾ.25: ಬಿಬಿಎಂಪಿ ಆಸ್ತಿ ತೆರಿಗೆ (BBMP Property Tax) ದರ ಏಪ್ರಿಲ್ 1 ರಿಂದ ಹೆಚ್ಚುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಎಂದು ಬಿಬಿಎಂಪಿ (BBMP) ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

“ಏಪ್ರಿಲ್ 1, 2024 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರವನ್ನು ಹೆಚ್ಚಿಸುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಪೆಡ್ಲರ್​ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ. ಬಿಬಿಎಂಪಿ ಯಾವುದೇ ಆಸ್ತಿ ತೆರಿಗೆಯನ್ನು ಹೆಚ್ಚಿಸಿಲ್ಲ, 2016 ರಲ್ಲಿ ನಿಗದಿಪಡಿಸಿದ ದರದಲ್ಲಿಯೇ ವಿಧಿಸಲಾಗುವುದು. ದಯವಿಟ್ಟು ಈ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ” ಎಂದು ಮನವಿ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಎಕ್ಸ್ ಪೋಸ್ಟ್

ಕರ್ನಾಟಕದಲ್ಲಿ ಭಾರಿ ತೆರಿಗೆ ಹೆಚ್ಚಳವಾಗಲಿದೆ ಎಂದು ಇಂಡೆಕ್ಸ್‌.ಡೈಲಿ ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅನುರಾಗ್‌ ಸಿಂಗ್‌ ಎಂಬುವವರು ವಿಡಿಯೊ ಹರಿಯಬಿಟ್ಟಿದ್ದರು. ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ಮೇಲಿನ ತೆರಿಗೆ 3 ರಿಂದ 5 ಪಟ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, 1ನೇ ಏಪ್ರಿಲ್ 2024 ರಿಂದ ಬಿಬಿಎಂಪಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವೀಡಿಯೊಗಳು ಹರಿದಾಡುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ ಎಂದಿದ್ದಾರೆ.

ತುಷಾರ್ ಗಿರಿನಾಥ್ ಎಕ್ಸ್ ಪೋಸ್ಟ್

ಬಿಬಿಎಂಪಿ ಆಸ್ತಿ ತೆರಿಗೆ ರಿಯಾಯಿತಿ

ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ನೀಡುವ ಶೇ.5 ರಷ್ಟು ರಿಯಾಯಿತಿಯು ಈ ಹಿಂದೆ ಆರ್ಥಿಕ ವರ್ಷದ ಮೊದಲ ಎರಡು ತಿಂಗಳು ಅಂದರೆ, ಏಪ್ರಿಲ್ ಮತ್ತು ಮೇ ತಿಂಗಳವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಇದೀಗ ಈ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.

ತೆರಿಗೆ ಬಾಕಿ ಮೇಲಿನ ದಂಡ ಶೇ.50ರಷ್ಟು ಇಳಿಕೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದೆ. ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜತೆಗೆ ಪಾಲಿಕೆಗೆ ಸುಮಾರು 1,000 ಕೋಟಿ ರೂಪಾಯಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, ಸುಮಾರು 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ: ಕಂದಾಯ ಅಧಿಕಾರಿಗಳ ವಿರುದ್ಧ ನಕಲಿ ಎ ಖಾತಾ ಆರೋಪ; ಪಾಲಿಕೆ ಆಯುಕ್ತರಿಗೆ ದೂರು

ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳೆಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 1 ಸಾವಿರ ಚದರ ಅಡಿ ವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ.

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ