ಬೆಂಗಳೂರು: ಕೊರೊನಾದ ಒಮಿಕ್ರಾನ್ ರೂಪಾಂತರಿ ಸೋಂಕು ನಿರ್ವಹಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವ ಸಭೆ ನಡೆಯಿತು. ರಾಜ್ಯದ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ತಜ್ಞರ ಜತೆ ಮುಖ್ಯಮಂತ್ರಿ ತುರ್ತು ಸಭೆ ನಡೆಸುತ್ತಿದ್ದಾರೆ. ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಸಿದ್ಧಪಡಿಸುವುದು. ವಿಮಾನ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ ಸಾಧ್ಯತೆಯಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಳಿಗಾಲದ ಅಧಿವೇಶನಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಸೂಚನೆ ನೀಡಿದರು. ಕಟ್ಟುನಿಟ್ಟಿನ ನಿಯಮಗಳ ನಡುವೆ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ.
ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿದರು. ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು ಎಂದು ತಜ್ಞರು ಸಭೆಯಲ್ಲಿ ಸಲಹೆ ಮಾಡಿದರು.
ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಗೋವಿಂದ ಕಾರಜೋಳ, ಡಾ.ಅಶ್ವತ್ಥ್ ನಾರಾಯಣ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ತಜ್ಞ ವೈದ್ಯರಾದ ಡಾ.ಎಂ.ಕೆ.ಸುದರ್ಶನ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ತಲುಪುವಂತೆ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ: ವ್ಯಾಕ್ಸಿನೇಷನ್, ಮುಂಚಿನ ಸೋಂಕುಗಳ ಕಾರಣದಿಂದಾಗಿ ಒಮಿಕ್ರಾನ್ ತೀವ್ರತೆ ಕಡಿಮೆ: ಆರೋಗ್ಯ ಸಚಿವಾಲಯ
ಇದನ್ನೂ ಓದಿ: ಒಮಿಕ್ರಾನ್ ಪತ್ತೆ ಹಿನ್ನೆಲೆ ಹೊಸ ಮಾರ್ಗಸೂಚಿ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ; ಆರೋಗ್ಯ ಸಚಿವ ಡಾ. ಸುಧಾಕರ್
Published On - 3:01 pm, Fri, 3 December 21