ಪ್ರಧಾನಿ ಮೋದಿ ಭೇಟಿ: ಬೆಂಗಳೂರಿನ ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸ್ ತಪಾಸಣೆ, ಹೊಸಬರು ಬಂದರೆ ಮಾಹಿತಿ ನೀಡಲು ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅವರ ನವೆಂಬರ್ 13ರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಎಸ್‌ಪಿಜಿ ತಂಡ ಪ್ರಧಾನಿ ಸಂಚರಿಸುವ ಮಾರ್ಗ, ಮೆಟ್ರೋ ರೈಲು ಹಾಗೂ ಕಾರ್ಯಕ್ರಮದ ಸ್ಥಳಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. 1,000ಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಿಬ್ಬಂದಿ ಸೇರಿದಂತೆ ಭಾರೀ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಪ್ರಧಾನಿ ಮೋದಿ ಭೇಟಿ: ಬೆಂಗಳೂರಿನ ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸ್ ತಪಾಸಣೆ, ಹೊಸಬರು ಬಂದರೆ ಮಾಹಿತಿ ನೀಡಲು ಸೂಚನೆ
ಮೋದಿ ಆಗಮನಕ್ಕೆ ಬಿಗಿ ಭದ್ರತೆ
Edited By:

Updated on: Nov 12, 2026 | 9:20 AM

ಬೆಂಗಳೂರು, ನವೆಂಬರ್ 12: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳು, ಮೆಟ್ರೋ ರೈಲು ಹಾಗೂ ಕಾರ್ಯಕ್ರಮ ನಡೆಯುವ ವೇದಿಕೆಗಳಲ್ಲಿ ಯಾವುದೇ ರೀತಿಯ ಭದ್ರತಾ ಲೋಪವಾಗದಂತೆ ವಿಶೇಷ ನಿಗಾ ವಹಿಸಲಾಗಿದೆ. ಪ್ರಧಾನಿ ಭೇಟಿಗೆ ಸುಮಾರು 10 ದಿನಗಳ ಮೊದಲೇ ಬೆಂಗಳೂರಿಗೆ ಆಗಮಿಸಿರುವ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ತಂಡ, ಮೋದಿ ಸಂಚರಿಸಲಿರುವ ರಸ್ತೆ ಮಾರ್ಗಗಳು, ಮೆಟ್ರೋ ಪ್ರಯಾಣದ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಸ್ಥಳಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿರುವ ಬೃಹತ್ ಕಟ್ಟಡಗಳ ಮೇಲೆಯೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಹೈ ರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೊಸದಾಗಿ ಯಾರಾದರೂ ವಾಸಕ್ಕೆ ಬಂದಿದ್ದರೆ ಅವರ ಬಗ್ಗೆ ಮಾಹಿತಿ ನೀಡುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ರಸ್ತೆಗಳಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ ನಿರಂತರ ನಿಗಾ ವಹಿಸುವಂತೆ ಎಸ್‌ಪಿಜಿ ಅಧಿಕಾರಿಗಳು ಸೂಚಿಸಿದ್ದಾರೆ.

Loading...

ಸೀಮಂತ್ ಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಪ್ರಧಾನಿ ಭದ್ರತೆಗೆ ವ್ಯಾಪಕ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಮೂವರು ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿಗಳು, 20 ಎಸಿಪಿಗಳು, 30 ಇನ್‌ಸ್ಪೆಕ್ಟರ್‌ಗಳು, 100ಕ್ಕೂ ಹೆಚ್ಚು ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 1,000ಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಬೆಂಗಳೂರಿನಲ್ಲಿ ಮೋದಿ ಕಾರ್ಯಕ್ರಮಗಳು ಏನು?

ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ತೆರಳಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಚಾಲನೆ ನೀಡಲಿದ್ದಾರೆ. ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಬೆಂಗಳೂರಿನಲ್ಲಿ ₹15,600 ಕೋಟಿಗೂ ಹೆಚ್ಚಿನ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಬೆಂಗಳೂರು ಭೇಟಿ: ನವೆಂಬರ್ 13ರಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ದಕ್ಷಿಣ ಭಾಗದ ಹಲವು ರಸ್ತೆಗಳಲ್ಲಿ ತಾತ್ಕಾಲಿಕ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆ ಕೂಡ ಜಾರಿಯಲ್ಲಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರ ದಟ್ಟಣೆ ತಪ್ಪಿಸಲು ಪೊಲೀಸರು ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us