ಬೆಂಗಳೂರು ಅ.22: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬಹಳ ದಿನಗಳಿಂದ ಮಂಡಿನೋವಿನ ಬಾಧೆ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯಲ್ಲಿರುವ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದರು.
ಇದನ್ನೂ ಓದಿ: ಕರ್ನಾಟಕದಲ್ಲಿ ನಡೆಯುತ್ತಿರುವ ಕಮಿಷನ್ ಲಾಬಿಗಳು ಬಹಿರಂಗ: ಬಸವರಾಜ ಬೊಮ್ಮಾಯಿ
ಶನಿವಾರ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಬೊಮ್ಮಾಯಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅವರೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ ಸಹ ಇದ್ದರು.
ಕೆಲ ವರ್ಷಗಳಿಂದ ಬೊಮ್ಮಾಯಿಯವರು ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು. ನಡೆದಾಡುವಾಗ ಸಮಸ್ಯೆ ಎದುರಿಸುತ್ತಿದ್ದರು. ಆದರೂ ಸಹ ಅವರು ಕುಂಟುತ್ತಾ ರಾಜಕೀಯ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಕೊನೆಗೆ ನೋವು ಹೆಚ್ಚಾಗಿದ್ದರಿಂದ ಅವರು ಸಿಎಂ ಸ್ಥಾನದಲ್ಲಿರುವಾಗಲೇ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.
ಒಂದು ವೇಳೆ ಆಪರೇಷನ್ ಮಾಡಿಸಿಕೊಂಡರೇ ಹಲವು ದಿನಗಳ ವಿಶ್ರಾಂತಿ ಅಗತ್ಯವಿರುತ್ತೆ ಎಂದು ಆಪರೇಷನ್ ಮಾಡಿಸಿಕೊಳ್ಳುವುದನ್ನು ಕೈಬಿಟ್ಟಿದ್ದರು. ಬದಲಿಗೆ ಬಸವರಾಜ ಬೊಮ್ಮಾಯಿ ಅವರು ಮಂಡಿ ನೋವಿಗೆ ಆಯುರ್ವೇದ ಚಿಕಿತ್ಸೆ ಸಹ ಪಡೆದುಕೊಂಡಿದ್ದರು. ಮೈಸೂರಿನ ಮೂಲದ ಖ್ಯಾತ ನಾಟಿ ವೈದ್ಯ ಲೋಕೇಶ್ ಟೇಕ್ ಅವರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಇದೀಗ ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ದಿನಗಳ ಕಾಲ ಅವರಿಗೆ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಅವರು ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:39 pm, Sun, 22 October 23