
ಬೆಂಗಳೂರು, ನವೆಂಬರ್ 12: ನಾಳೆ (ನವೆಂಬರ್ 13) ಕರ್ನಾಟಕದ ಬೆಂಗಳೂರು ಮತ್ತು ಮೈಸೂರು ಪ್ರವಾಸಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಎಕ್ಸ್ ಪೋಸ್ಟ್ ಮಾಡುವ ಮೂಲಕ ಸ್ವತಃ ಮಾಹಿತಿ ಹಂಚಿಕೊಂಡಿದ್ದಾರೆ. ನಮಸ್ಕಾರ ಕರ್ನಾಟಕ. ನಾಳೆ, ನವೆಂಬರ್ 13 ರಂದು ಬೆಂಗಳೂರು ಮತ್ತು ಮೈಸೂರಿನಲ್ಲಿರಲು ಕಾತುರದಿಂದ ಎದುರು ನೋಡುತ್ತಿದ್ದೇನೆ ಎಂದವರು ಬರೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ 15,600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮೈಸೂರಿನಲ್ಲಿ ಭಾರತದ ಮೊದಲ ಎಲ್‌ಇಡಿ ಡೋಮ್ ತಾರಾಲಯವಾದ ಕಾಸ್ಮೋಸ್ ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಬಗ್ಗೆ ಕನ್ನಡದಲ್ಲಿಯೂ ಪ್ರಧಾನಿ ಮಾಹಿತಿ ಹಂಚಿಕೊಂಡಿದ್ದು, ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ, 15,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮತ್ತು ಕಾಸ್ಮೋಸ್ – ಮೈಸೂರು ತಾರಾಲಯದ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ನಾಳೆ ಮೈಸೂರಿನಲ್ಲಿ ಪಿಎಂ ಮೋದಿ ಉದ್ಘಾಟಿಸಲಿರುವ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ಹೇಗಿದೆ ನೋಡಿ
ಬೆಳಿಗ್ಗೆ 10.45ರ ಸುಮಾರಿಗೆ ಬೆಂಗಳೂರಿನ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12.45ರ ಸುಮಾರಿಗೆ ತಾವರೆಕೆರೆಯಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.15ರ ಸುಮಾರಿಗೆ ಬೆಂಗಳೂರಿನಲ್ಲಿ 15,600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೆಲವು ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮೈಸೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 3.30ರ ಸುಮಾರಿಗೆ ಕಾಸ್ಮೋಸ್-ಮೈಸೂರು ತಾರಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲೂ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿಗಳ ಕಚೇರಿ ಮಾಹಿತಿ ನೀಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.