ಬೆಂಗಳೂರು: ವಿಶ್ವ ಯೋಗದಿನದ (World Yoga Day) ಪ್ರಯುಕ್ತ ಮೈಸೂರಿನಲ್ಲಿ ಜೂನ್ 21ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡಿದ್ದ ಮೋದಿ, ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡರು. ಜೂನ್ 20, 21ರಂದು ಪ್ರಧಾನಿ ಪಾಲ್ಗೊಳ್ಳಬೇಕಿರುವ ಕಾರ್ಯಕ್ರಮಗಳ ಬಗ್ಗೆ ಮೋದಿ ಅವರಿಗೆ ಮಾಹಿತಿ ನೀಡಲಾಯಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಬೊಮ್ಮಾಯಿ ಮಾಹಿತಿ ನೀಡಿದರು.
ಸಭೆಯ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ತಧಾನಿ ಭೇಟಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ ಅವರು, ಪ್ರಧಾನಿಗಳ ಎರಡು ದಿನಗಳ ಸಿದ್ಧತೆಗಳ ಕುರಿತು ವಿವರವಾಗಿ ಚರ್ಚಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಧಾನಿ ಕಾರ್ಯಕ್ರಮದ ಕುರಿತು ಮೈಸೂರಿನಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಸಂಸದ ಪ್ರತಾಪ್ ಸಿಂಹ, ಪ್ರಧಾನಿ ನರೇಂದ್ರ ಮೋದಿ ಜೂನ್ 21ರಂದು ನಗರದಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಸೂಚನೆಯಂತೆ ಒಂದೇ ಸ್ಥಳದಲ್ಲಿ ಅಧಿಕೃತ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದರು. ಜೂನ್ 21ರ ಮಂಗಳವಾರ ಬೆಳಿಗ್ಗೆ 6:30ಕ್ಕೆ ಮೈಸೂರಿನ ಅಂಬಾವಿಲಾಸ ಅರಮನೆಗೆ ಪ್ರಧಾನಿ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 15 ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆಯಿದೆ. ವೇದಿಕೆಯಲ್ಲಿ ಪ್ರಧಾನಿ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇರುತ್ತಾರೆ ಎಂದು ಹೇಳಿದರು.
ವಿಶ್ವ ಯೋಗದಿನದ ಪ್ರಯುಕ್ತ ನಡೆಯಲಿರುವ ಯೋಗದಿನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಯೋಗಪಟುಗಳು ಬೆಳಿಗ್ಗೆ 5.30ರ ಒಳಗೆ ಅರಮನೆಗೆ ಬಂದಿರಬೇಕು. ಬೆಳಿಗ್ಗೆ 6.30ರಿಂದ 7ರವರಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. 7ರಿಂದ 7.45ರವರಗೆ ಪ್ರಧಾನಿ ಮೋದಿ ಅವರೊಂದಿಗೆ ಯೋಗಾಸನಗಳ ಪ್ರದರ್ಶನ ಇರಲಿದೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಜೂನ್ 21ಕ್ಕೆ. ಆದರೆ ಅವರು ಜೂನ್ 20ರಂದೇ ಬೆಂಗಳೂರಿಗೆ ಬಂದಿರುತ್ತಾರೆ. ಅಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಬರುವ ಪ್ರಧಾನಿ, ಮಹಾರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮೋದಿ ಅವರನ್ನು ಚಾಮುಂಡಿ ಬೆಟ್ಟ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡುವಂತೆ ವಿನಂತಿಸಲಾಗುವುದು. ಜೂನ್ 20ರ ಕಾರ್ಯಕ್ರಮ ಇನ್ನೂ ಅಂತಿಮಗೊಂಡಿಲ್ಲ. ಯೋಗಪಟುಗಳ ನೋಂದಣಿಯ ವಿಧಿವಿಧಾನಗಳು ಇನ್ನೂ ರೂಪುಗೊಳ್ಳಬೇಕಿದೆ ಎಂದು ಹೇಳಿದ್ದರು.
ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:54 pm, Thu, 9 June 22