
ಬೆಂಗಳೂರು, ಸೆಪ್ಟೆಂಬರ್ 13: ಕರ್ನಾಟಕದ ಖಾಸಗಿ ಶಾಲೆಗಳ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಶುಭ ಸುದ್ದಿ ಸಿಗುವ ಸಾಧ್ಯತೆ ಇದ್ದು, ಅರ್ಹ ಖಾಸಗಿ ಶಾಲಾ ಶಿಕ್ಷಕರನ್ನೂ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಪರಿಗಣಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅತ್ತಿಬೆಲೆಯ ಸೇಂಟ್ ಫಿಲೋಮಿನಾ ಸಂಸ್ಥೆಯಲ್ಲಿ ಅನೆಕಲ್ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬೇಡಿಕೆ ಸರ್ಕಾರದ ಮಟ್ಟದಲ್ಲಿ ಪರಿಶೀಲನೆಯಲ್ಲಿದೆ. ಈ ಕುರಿತು ಮತ್ತಷ್ಟು ಚರ್ಚೆ ನಡೆಸಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೂ ಸರ್ಕಾರಿ ನೌಕರರಿಗೆ ನೀಡುವ ಮನೆ ಬಾಡಿಗೆ ಭತ್ಯೆ (HRA) ವಿಸ್ತರಿಸುವ ಬೇಡಿಕೆ ಕುರಿತು ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ಸಮಿತಿ ಶಿಫಾರಸುಗಳನ್ನು ನೀಡಿದೆ ಎಂದು ತಿಳಿಸಿದ್ದಾರೆ. ಖಾಸಗಿ ಶಾಲೆಗಳಿಗೆ ಸರ್ಕಾರದ ಪಠ್ಯಪುಸ್ತಕಗಳನ್ನು ಒದಗಿಸುವಂತೆ ಮಾಡಬೇಕು ಹಾಗೂ ಅದಕ್ಕೆ ಅಗತ್ಯವಿರುವ ಹಣವನ್ನು ಶಾಲೆಗಳೇ ಪಾವತಿಸಲು ಸಿದ್ಧವಿರುವ ವಿಚಾರವೂ ಸರ್ಕಾರದ ಮಟ್ಟದಲ್ಲಿ ಪರಿಶೀಲನೆಯಲ್ಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಪರೀಕ್ಷೆ ಬಂದರೂ ಸಿಗದ ಪಠ್ಯಪುಸ್ತಕ; ಕೇಳೋರಿಲ್ಲ ವಿದ್ಯಾರ್ಥಿಗಳ ಗೋಳು
ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಅಕ್ಷಯ’ ಕಾರ್ಯಕ್ರಮವನ್ನು ಸ್ಮರಿಸಿದ ಸಚಿವರು, ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಹಾಗೂ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವುದು ಇದರ ಉದ್ದೇಶವಾಗಿತ್ತು. ಈ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ನಿಯಮಿತವಾಗಿ ಹಾಜರಾಗುವ ಮಕ್ಕಳಿಗೆ ದಿನಕ್ಕೆ ಒಂದು ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು ಎಂದಿದ್ದಾರೆ. ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಒಂದು ಕೋಟಿಗೂ ಅಧಿಕ ಮಕ್ಕಳು ಇದ್ದಾರೆ. ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲು ತಾವು ಕೆಲಸ ಮಾಡುತ್ತಿರುವುದಾಗಿ ಸಚಿವರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.