ನೂಪುರ್ ಶರ್ಮಾ ಹೇಳಿಕೆಯ ಕಿಡಿ: ದೇಶದ ವಿವಿಧೆಡೆ ಮುಸ್ಲಿಮರ ಪ್ರತಿಭಟನೆ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಡಿಜಿಪಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 10, 2022 | 6:07 PM

ಹಿಂಸಾಚಾರಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಜಿಪಿಗೆ ಸೂಚನೆ ನೀಡಿದ್ದಾರೆ

ನೂಪುರ್ ಶರ್ಮಾ ಹೇಳಿಕೆಯ ಕಿಡಿ: ದೇಶದ ವಿವಿಧೆಡೆ ಮುಸ್ಲಿಮರ ಪ್ರತಿಭಟನೆ, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಡಿಜಿಪಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಬೆಳಗಾವಿಯಲ್ಲಿ ನೂಪುರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
Follow us on

ಬೆಂಗಳೂರು: ಪ್ರವಾದಿ ಮೊಹಮದ್ ಪೈಗಂಬರ್ ಬಗ್ಗೆ ನೂಪುರ್​ ಶರ್ಮಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಬೇಕು. ಸೂಕ್ತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಹಿಂಸಾಚಾರಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಜಿಪಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಕಬೇಕು. ಎಲ್ಲೂ ಕೂಡಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬರಬಾರದು. ಎಲ್ಲಾ ಎಸ್​ಪಿಗಳೊಂದಿಗೆ ಮಾತನಾಡಿ ಎಂದು ಡಿಜಿಪಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಡಿಜಿಪಿ ಪ್ರವೀಣ್ ಸೂದ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ವಿಧಾನಸೌಧಕ್ಕೆ ಕರೆಸಿಕೊಂಡು ಮುಖ್ಯಮಂತ್ರಿ ಬೊಮ್ಮಾಯಿ ಚರ್ಚಿಸಿದರು.

ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿದ ಕಿಡಿಗೇಡಿಗಳು

ಬೆಳಗಾವಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿ ಕಿಡಿಗೇಡಿಗಳು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿಯ ಪೋರ್ಟ್ ರಸ್ತೆಯ ಮಧ್ಯೆ ತಂತಿಯೊಂದಕ್ಕೆ ಪ್ರತಿಕೃತಿ ಗಲ್ಲಿಗೇರಿಸಲಾಗಿದೆ. ನಡು ರಸ್ತೆಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದಕ್ಕೆ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪಿಂಪಲ್ ಕಟ್ಟಾ ಮಸೀದಿ ಮುಂಭಾಗದಲ್ಲೇ ಮಧ್ಯರಾತ್ರಿ ಕಿಡಗೇಡಿಗಳು ಕೃತ್ಯ ಮೆರೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಕೃತಿ ತೆರವುಗೊಳಿಸಿದ್ದಾರೆ. ಪ್ರತಿಕೃತಿ ಮಧ್ಯರಸ್ತೆ ಜೋತುಬಿಟ್ಟಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಆಕ್ರೋಶ‌ ಹೊರ ಹಾಕಿದ್ದಾರೆ.

ಪ್ರವಾದಿ ಮೊಹಮದ್ ಪೈಗಂಬರ್‌ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಸ್​ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ನೂಪುರ್ ಶರ್ಮಾರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದ ಅವರು, ಶಿಸ್ತುಕ್ರಮ ಜರುಗಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Fri, 10 June 22