ಬೆಂಗಳೂರು, (ಆಗಸ್ಟ್ 08): ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ನೀಡಿದೆ. ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು 2022ರಲ್ಲಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿತ್ತು.
2022ರಲ್ಲಿ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ಪ್ರತಿಭಟನೆ ಮಾಡಿದ್ದಕ್ಕೆ ಶಿವಾಜಿನಗರ ಹಾಗೂ ವಿಲ್ಸನ್ ಗಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದವು. ಆದ್ರೆ, ಡಿಕೆ ಶಿವಕುಮಾರ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಕಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆದ್ರೆ, ಇದೀಗ ವಿಲ್ಸನ್ ಗಾರ್ಡನ್ ಕೇಸ್ನಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.
ಇದನ್ನೂ ಓದಿ: ಅಮಿತ್ ಶಾ ಭೇಟಿಯಾಗಿದ್ದೇಕೆ ಹೆಚ್ಡಿ ದೇವೇಗೌಡ? ಡಿಕೆ ಶಿವಕುಮಾರ್ ಕೊಟ್ಟರು ಕಾರಣ!
ವಿಚಾರಣೆ ನೆಪದಲ್ಲಿ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ 2022 ರ ಜೂ.16ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ವಿಲ್ಸನ್ ಗಾರ್ಡನ್ ಮತ್ತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು.
ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕೆಂದು ಕಡ್ಡಾಯಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದರು. ಈ ಆದೇಶ ಉಲ್ಲಂಘಿಸಿ ಡಿ.ಕೆ.ಶಿವಕುಮಾರ್ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿದ್ದರು. ಆ ಮೂಲಕ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಸಹ ಪಡೆದಿಲ್ಲ ಎಂದು 2022ರ ಜೂ.16ರಂದು ದಾಖಲಿಸಿದ ಖಾಸಗಿ ದೂರಿನಲ್ಲಿ ದೂರುದಾರರು ಆರೋಪಿಸಿದ್ದರು. ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ 42ನೇ ಎಸಿಎಂಎಂ ನ್ಯಾಯಾಲಯ, ಡಿ.ಕೆ.ಶಿವಕುಮಾರ್ಗೆ ಸಮನ್ಸ್ ಜಾರಿ ಮಾಡಿತ್ತು. ಇನ್ನೊಂದೆಡೆ ಈ ಪ್ರಕರಣ ರದ್ದುಪಡಿಸಲು ಕೋರಿ ಡಿಕಿ ಶಿವಕುಮಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಡಿಕೆಶಿ ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕೋರ್ಟ್, ಸಿಎಂ, ಡಿಸಿಎಂಗೆ ಸಮನ್ಸ್ ಜಾರಿ ಮಾಡಿದೆ.
Published On - 3:38 pm, Thu, 8 August 24