
ಬೆಂಗಳೂರು, (ಫೆಬ್ರವರಿ 17): 545 ಪಿಎಸ್ಐ ಅಕ್ರಮ ನೇಮಕಾತಿ (PSI recruitment scam) ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದೆ. ಎಫ್ಡಿಎ ಅಧಿಕಾರಿ ಚಂದ್ರಕಾಂತ್, ಬಾಲಕ ವಸತಿ ನಿಲಯ ವಾರ್ಡನ್ ಬಸವರಾಜ್ ಹಾಗೂ ಶಶಿಧರ್ ಎನ್ನುವರನ್ನು ಬಂಧಿಸಿದ್ದಾರೆ. ಈ ಮೂವರು ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಸಿದಂತೆ ಕಲಬುರಗಿಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಜ್ಯದಲ್ಲಿ ನಡೆದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಜ.22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ನೀಡಿದೆ.
ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಸೇರಿದ 545 ಪಿಎಸ್ಐ ನೇಮಕಾತಿ ಅಕ್ರಮದ ತನಿಖಾ ವರದಿ
545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.
ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು. 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್ಗಳ ಹಂತದಲ್ಲಿಯೂ ಕನಿಷ್ಠ 10 ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.
ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್ರನ್ನು ಬಂಧಿಸಲಾಗಿತ್ತು. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ತಿಳಿಸಿದ್ದರು.
Published On - 11:00 pm, Sat, 17 February 24