ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು, ಬಲವಂತದ ವಸೂಲಿಗೆ ಬ್ರೇಕ್ ಹಾಕಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ಸಂಬಂಧ ಡಿಸಿ, ಎಸ್ಪಿಗಳ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಸಭೆ ಮಾಡಿದ್ದು, ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು. ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರು, ಫೆಬ್ರವರಿ 15: ಹಲವು ಅಡೆತಡೆಗಳ ಬಳಿಕ ಕೊನೆಗೂ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅನುಮೋದನೆ ಸಿಕ್ಕಿದೆ. ಸಾಲ ಪಡೆದವರ ಆತಂಕಕ್ಕೆ ಇತಿಶ್ರೀ ಹಾಡಲು ಸುಗ್ರೀವಾಜ್ಞೆ ಲಗಾಮು ಬಳಸಲು ಸರ್ಕಾರಕ್ಕೆ ಅವಕಾಶ ದೊರಕಿದೆ. ಸದ್ಯ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ಸಂಬಂಧ ಡಿಸಿ, ಎಸ್ಪಿಗಳ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಮಾಡಿದ್ದು, ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು. ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಡಿಸಿ, ಎಸ್ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದು, ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದ್ದಾರೆ.
ಸಿಎಂ ಟ್ವೀಟ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕಾಗಿ ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿ @siddaramaiah ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶಾಲಿನಿ ರಜನೀಶ್, ಅಪರ… pic.twitter.com/PkHdb3A0Kk
— CM of Karnataka (@CMofKarnataka) February 15, 2025
ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು. ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಫೈನಾನ್ಸ್ ಕಿರುಕುಳ: ಮತ್ತೊಮ್ಮೆ ರಾಜ್ಯಪಾಲರ ಅಂಗಳಕ್ಕೆ ಸುಗ್ರೀವಾಜ್ಞೆ ಕರಡು ರವಾನೆ
ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ, ಆಯಾ ಜಿಲ್ಲೆಯ ಡಿಸಿ, ಎಸ್ಪಿಯೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ. ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ವರದಿ: ಈರಣ್ಣ ಬಸವ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:51 pm, Sat, 15 February 25