ಬೆಂಗಳೂರು, ಸೆ.11: ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಜೊತೆ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ. ಇನ್ನು ತಾಪಮಾನ ಗರಿಷ್ಠ 30 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಮಳೆ
ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Wed, 11 September 24