ಸಿಲಿಕಾನ್ ಸಿಟಿಯಲ್ಲಿ ಹಲವೆಡೆ ಮಳೆ ಆರಂಭ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 4 ದಿನ ಮಳೆ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 4 ದಿನ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರು ಮಹಾನಗರದ ಹಲವೆಡೆ ಮಳೆ (Rains) ಆರಂಭವಾಗಿದ್ದು, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಡಬಲ್ ರೋಡ್ ಸೇರಿದಂತೆ ಹಲವೆಡೆ ಗಾಳಿ ಸಹಿತ ಮಳೆಯಾಗಿದೆ. ವಾಹನ ಸವಾರರು, ಬೀದಿಬದಿ ವ್ಯಾಪಾರಿಗಳು ಪರಡಾಡಿದ್ದಾರೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 4 ದಿನ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದ್ದು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ ಭಾಗದಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇನ್ನು ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಲು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ತಮಿಳುನಾಡಿನ ಚೆನ್ನೈ ಸೇರಿದಂತೆ ಹಲವೆಡೆ ಇಂದು ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಚೆನ್ನೈ ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚೆನ್ನೈ ಮಾತ್ರವಲ್ಲ ಅಕ್ಕಪಕ್ಕದ ಜಿಲ್ಲೆಗಳಾದ ತಿರುವಳ್ಳುವರ್, ಕಾಂಚೀಪುರಂ ಹಾಗೂ ಚೆಂಗಲ್‌ಪಟ್ಟು ಜಿಲ್ಲೆಗಳಲ್ಲೂ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಇಂದು ಕರಾವಳಿ ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ರಾಯಲಸೀಮಾ, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಕೊಂಕಣ, ಗೋವಾ, ತೆಲಂಗಾಣ ಮತ್ತು ಉತ್ತರ ಆಂತರಿಕ ಕರ್ನಾಟಕದ ಮೇಲೆ ಮಿಂಚು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:41 pm, Thu, 3 November 22