Karnataka Rains: ಕರಾವಳಿ ಭಾಗದಲ್ಲಿ ಜುಲೈ 12ರ ವರೆಗೂ ಮಳೆ, ಇಂದು ಶಾಲಾ-ಕಾಲೇಜಿಗೆ ರಜೆ ಘೋಷಣೆ
ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಉತ್ತರ ಒಳನಾಡಿನ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಜುಲೈ.09: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ (Karnataka Rain). ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದರು.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜು.12ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯದ ಮಳೆ ಕುರಿತು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಇಂದು ಉತ್ತರ ಒಳನಾಡಿನ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೆೇಗ (30-40 kmph) ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳು; ಡೆಂಗ್ಯೂ ಜೊತೆ ಝಿಕಾ ವೈರಸ್ ಆತಂಕ
ಕರಾವಳಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಹಾಘೂ ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ