Karnataka Weather Forecast: ಅಕ್ಟೋಬರ್ 10ರ ವರೆಗೂ ಕರಾವಳಿಯಲ್ಲಿ ಮಳೆ; ನಾಳೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 10ರ ವರೆಗೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ನಾಳೆ ಶಿವಮೊಗ್ಗ, ಮೈಸೂರು, ಬೆಂಗಳೂರು ನಗರ ಸೇರಿದಂತೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ಅಕ್ಟೋಬರ್ 06: ಅಕ್ಟೋಬರ್ 10ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಮಂಗಳವಾರದಿಂದ ಮೋಡ ಕವಿದ ವಾತಾವರಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಸಂಜೆ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮಲೆನಾಡು ಭಾಗದ ಅಲ್ಲಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆಯಾದರೂ, ಅಕ್ಟೋಬರ್ 8ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
9 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಅಕ್ಟೋಬರ್ ಆರಂಭದಲ್ಲೇ ಮಧ್ಯ ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ: ಹಾವೇರಿ, ದಾವಣಗೆರೆಯಲ್ಲಿ ಹೆಚ್ಚಿದ ಉಷ್ಣಾಂಶ
ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಇದೇ ರೀತಿಯ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




