ಬೆಂಗಳೂರು: ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ (P Ravikumar) ಅವರು ಮೇ 31ಕ್ಕೆ ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ವಂದಿತಾ ಶರ್ಮಾ ಅವರನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಗುರುತಿಸಿದೆ. 1986ನೇ ಬ್ಯಾಚ್ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಪ್ರಸ್ತುತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನವೆಂಬರ್ 2023ಕ್ಕೆ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಅವಧಿಯಲ್ಲಿ ಅವರೇ ಮುಖ್ಯಕಾರ್ಯದರ್ಶಿಯಾಗಿರುತ್ತಾರೆ.
ಮುಖ್ಯಕಾರ್ಯದರ್ಶಿ ನಿವೃತ್ತಿ ಮತ್ತು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸ್ಥಾನವೂ ಶೀಘ್ರ ತೆರವಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಉನ್ನತ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಒಟ್ಟ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆಯಕಟ್ಟಿನ ಜಾಗಗಳಿಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.
ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ರಜನೀಶ್ ಗೋಯಲ್ ಅವರರಿಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನೂ ನೀಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಅವರಿಗೆ ಬೆಂಗಳೂರಿನ ಅಭಿವೃದ್ಧಿ ಆಯುಕ್ತ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.
ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಡಾ.ರಾಮ್ ಪ್ರಸಾದ್ ಮನೋಹರ್ ಅವರನ್ನು ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಕಮೀನಷರ್ (ಪೂರ್ವ) ಹುದ್ದೆಗೆ, ಸಣ್ಣ ಮತ್ತ ಮಧ್ಯಮ ಕೈಗಾರಿಕೆ ನಿರ್ದೇಶಕ ವಿನೋತ್ ಪ್ರಿಯಾ ಅವರನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಹುದ್ದೆಗೆ, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಆಯುಕ್ತ ಡಿಎಸ್.ರಮೇಶ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಮಹಾ ನಗರ ಪಾಲಿಕೆ (ಕಲ್ಯಾಣ) ವಿಶೇಷ ಆಯುಕ್ತರಾಗಿದ್ದ ಶರತ್ ಅವರನ್ನು ಕೃಷಿ ಇಲಾಖೆ ಆಯುಕ್ತ ಹುದ್ದೆಗೆ ವರ್ಗಾವಣೆಯಾಗಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ನಿರ್ದಶಕಿ ಸಿ.ಸತ್ಯಭಾಮಾ ಅವರನ್ನು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:05 am, Mon, 30 May 22