AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಪೋಲಿಂಗ್ ಏಜೆಂಟ್ ಆಗಿ ಡಿಕೆ ಶಿವಕುಮಾರ್ ಘೋಷಣೆ ಸಾಧ್ಯತೆ

ಪಕ್ಷದ ಶಾಸಕರು ಅಡ್ಡಮತ ಚಲಾಯಿಸದಂತೆ ತಡೆಯಲು ತಂತ್ರ ರೂಪಿಸಿರುವ ಕಾಂಗ್ರೆಸ್​, ಈ ಹಿಂದೆಯೂ ಪೋಲಿಂಗ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಜವಾಬ್ದಾರಿ ನೀಡಲು ಮುಂದಾಗಿದೆ.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಪೋಲಿಂಗ್ ಏಜೆಂಟ್ ಆಗಿ ಡಿಕೆ ಶಿವಕುಮಾರ್ ಘೋಷಣೆ ಸಾಧ್ಯತೆ
ಡಿಕೆ ಶಿವಕುಮಾರ್
TV9 Web
| Edited By: |

Updated on:Jun 09, 2022 | 9:46 PM

Share

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ (ಜೂನ್) ಚುನಾವಣೆ (Rajya Sabha Election) ನಡೆಯಲಿದೆ. ಕಾಂಗ್ರೆಸ್ ಪಕ್ಷವು ಅಡ್ಡ ಮತದಾನಕ್ಕೆ ಕಡಿವಾಣ ಹಾಕಲು ಪೋಲಿಂಗ್ ಏಜೆಂಟ್ ಆಗಿ ಡಿ.ಕೆ.ಶಿವಕುಮಾರ್ (DK Shivakumar) ಅವರನ್ನೇ ಹೆಸರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಪಕ್ಷದ ಶಾಸಕರು ಅಡ್ಡಮತ ಚಲಾಯಿಸದಂತೆ ತಡೆಯಲು ತಂತ್ರ ರೂಪಿಸಿರುವ ಕಾಂಗ್ರೆಸ್​, ಈ ಹಿಂದೆಯೂ ಪೋಲಿಂಗ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಜವಾಬ್ದಾರಿ ನೀಡಲು ಮುಂದಾಗಿದೆ. ಹಿಂದೆ ಮತದಾನದ ವೇಳೆ ಮಾಜಿ ಸಚಿವ ಎಚ್​.ಡಿ.ರೇವಣ್ಣ ಅವರೊಂದಿಗೆ ಜಟಾಪಟಿ ನಡೆದಿತ್ತು. ಮತದಾನದ ವೇಳೆ ಏರುಪೇರಾದರೆ ಗಟ್ಟಿಯಾಗಿ ಮಾತನಾಡುವ ಸಾಮರ್ಥ್ಯ ಇರುವವನ್ನೇ ಏಜೆಂಟ್ ಮಾಡಬೇಕು ಎಂದು ಕಾಂಗ್ರೆಸ್ ನಿರ್ಧರಿಸಿದ್ದು, ರಿಟರ್ನಿಂಗ್ ಆಫೀಸರ್ ಜತೆ ಏರುದನಿಯಲ್ಲಿ ಮಾತಾಡುವ ಛಾತಿಯಿರುವ ಡಿ.ಕೆ.ಶಿವಕುಮಾರ್ ಅವರಿಗೇ ಪೋಲಿಂಗ್ ಏಜೆಂಟ್ ಹೊಣೆ ನೀಡುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯಸಭೆಯ 4 ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಜೈರಾಮ್​ ರಮೇಶ್ ಮತ್ತು ಮನ್ಸೂರ್ ಅಲಿ ಖಾನ್ ಶಾಸಕರ ಮತ ಯಾಚಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್​ನ ಸಭಾ ನಾಯಕ ಬಿ.ಕೆ.ಹರಿಪ್ರಸಾದ್ ಭಾಗವಹಿಸಿದ್ದರು.

ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಬಹಿರಂಗ ಪತ್ರ

ಜೆಡಿಎಸ್​ನ ಶಾಸಕರಿಗೆ ಬಹಿರಂಗವಾಗಿ ಪತ್ರ ಬರೆದಿದ್ದ ಸಿದ್ದರಾಮಯ್ಯ ಎಲ್ಲ ಶಾಸಕರ ಆತ್ಮಸಾಕ್ಷಿ ಮತ ಯಾಚಿಸಿದ್ದರು. ಅವರ ಪತ್ರದ ಸಾಲುಗಳಿವು…

ದೇಶವು ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಕ್ಷೇತ್ರಗಳು ಸೇರಿದಂತೆ ಎಲ್ಲ ಬದಲಾವಣೆಗಳಿಗೂ ರಾಜಕೀಯ ಬದಲಾವಣೆಯೇ ಚಾಲನಾ ಶಕ್ತಿ ಎನ್ನುವುದು ನಾವು ಇತಿಹಾಸದಿಂದ ಕಲಿತ ಪಾಠವಾಗಿದೆ. ಕಲಿತ ಪಾಠವನ್ನು ಪ್ರಯೋಗಿಸುವ ಅವಕಾಶ ಎದುರಾದಾಗ ಮುಕ್ತ ಮನಸ್ಸಿನಿಂದ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ.

ಇಂತಹದ್ದೊಂದು ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಅವಕಾಶವನ್ನು ಇದೇ ಜೂನ್ ಹತ್ತರಂದು ರಾಜ್ಯದಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆ ನಮಗೆ ನೀಡಿದೆ. ಕಾಂಗ್ರೆಸ್ ಕೋಮುವಾದದ ಜೊತೆ ಎಂದೂ ರಾಜಿಯಾಗದೆ ಜಾತ್ಯತೀತತೆ ಪರವಾಗಿ ಗಟ್ಟಿಯಾಗಿ ನಿಂತಿರುವ ಪಕ್ಷ. ಕೋಮುವಾದಿ ಶಕ್ತಿಗಳನ್ನು ಸೋಲಿಸುವ ಪ್ರಸಂಗ ಎದುರಾದಾಗ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಲೆಕ್ಕಿಸದೆ ಜಾತ್ಯತೀತತೆ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.

ಜಾತ್ಯತೀತ ಜನತಾದಳದ ಹಿರಿಯ ನಾಯಕ ಹೆಚ್.ಡಿ.ದೇವೇಗೌಡರಿಗೆ ಪ್ರಧಾನಿಯಾಗುವ ಅವಕಾಶ ಎದುರಾದಾಗ ಕಾಂಗ್ರೆಸ್ ಪಕ್ಷ ಮುಕ್ತ ಹೃದಯದಿಂದ ಬೆಂಬಲಿಸಿತ್ತು. ಎರಡು ವರ್ಷಗಳ ಹಿಂದೆ ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಚುನಾವಣೆಯನ್ನು ಎದುರಿಸಿದಾಗ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಗೌಡರನ್ನು ಬೆಂಬಲಿಸಿ ಗೆಲ್ಲಿಸಿತ್ತು. ನಾಲ್ಕು ವರ್ಷಗಳ ಹಿಂದೆ ಕೇವಲ 37 ಶಾಸಕರನ್ನು ಹೊಂದಿದ್ದ ಜಾತ್ಯತೀತ ಜನತಾದಳಕ್ಕೆ ನಮ್ಮ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಹೆಚ್.ಡಿ.ಕುಮರಾಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿತ್ತು.

ಇದು ನಮ್ಮ ಸೈದ್ದಾಂತಿಕ ಬದ್ದತೆ. ಈ ಬಾರಿ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇದೇ ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ನಮ್ಮ ಎರಡನೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬಹುದು ಎಂಬ ನಿರೀಕ್ಷೆಯಿಂದ ನಮ್ಮ ಯುವನಾಯಕ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದೆವು. ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ ಮರುದಿನ ತಮ್ಮಲ್ಲಿ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಪಕ್ಷ, ಹಠಾತ್ತನೆ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ನಮಗೆ ಆಘಾತವುಂಟುಮಾಡಿದೆ.

ಈ ಚುನಾವಣೆ ಬಹುಮುಖ್ಯವಾಗಿ ಜಾತ್ಯತೀತತೆ ಮತ್ತು ಕೋಮುವಾದ ಎಂಬ ಎರಡು ಸಿದ್ದಾಂತಗಳ ನಡುವಿನ ಸಮರವೂ ಆಗಿದೆ ಎನ್ನುವುದನ್ನು ನೀವು ಬಲ್ಲಿರಿ. ರಾಷ್ಟ್ರಕವಿ ಕುವೆಂಪು ಅವರು ಹೆಮ್ಮೆಯಿಂದ ಹೇಳಿಕೊಂಡ ಸರ್ವಜನಾಂಗದ ಶಾಂತಿಯ ತೋಟವನ್ನು ಬಿಜೆಪಿ, ಧಾರ್ಮಿಕ ದ್ವೇಷಾಸೂಯೆಗಳಿಂದ ಹಾಳುಗೆಡಹುತ್ತಿರುವುದನ್ನು ನಾವು ನಿತ್ಯ ನೋಡುತ್ತಿದ್ದೇವೆ. ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರು, ನಾಡಪ್ರಭು ಕೆಂಪೇಗೌಡ, ಕುವೆಂಪು ಸೇರಿದಂತೆ ನಾವು ಗೌರವಿಸುವ ಮಹಾಪುರುಷರಿಗೆ ಮಾಡಿರುವ ಅವಮಾನ ಇದಕ್ಕೆ ಇತ್ತೀಚಿನ ಜ್ವಲಂತ ಉದಾಹರಣೆ.

ಕನ್ನಡಿಗರೆಲ್ಲರ ಆತ್ಮಸ್ವರೂಪಿಯಾದ ಕುವೆಂಪು ವಿರಚಿತ ನಾಡಗೀತೆಯನ್ನೇ ತಿರುಚಿದ ಕಿಡಿಗೇಡಿಯಿಂದಲೇ ಈ ಎಲ್ಲ ದುಷ್ಕತ್ಯಗಳನ್ನು ಮಾಡಿಸುವ ಧಾರ್ಷ್ಟ್ಯವನ್ನು ಬಿಜೆಪಿ ತೋರಿದೆ. ರಾಜ್ಯಸಭಾ ಚುನಾವಣೆಯ ಮೂಲಕ ಒದಗಿ ಬಂದ ಅವಕಾಶವನ್ನು ಬಳಸಿಕೊಂಡು ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕೆಂದು ಜಾತ್ಯತೀತತೆ, ಸೌಹಾರ್ದತೆ ಮತ್ತು ಸಹಬಾಳ್ವೆಯ ಮೇಲೆ ನಂಬಿಕೆ ಇಟ್ಟಿರುವ ನಾಡಬಾಂಧವರೆಲ್ಲರ ಮನದಾಳದ ಹಾರೈಕೆಯಾಗಿದೆ.

ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ.

ಮನ್ಸೂರು ಅಲಿ ಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ. ಪ್ರಜಾಪ್ರತಿನಿಧಿಗಳಾದ ನಾವೆಲ್ಲರೂ ನಮ್ಮ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ದವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ನನ್ನ ಸವಿನಯ ವಿನಂತಿ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Thu, 9 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ