
ಬೆಂಗಳೂರು, (ಜೂನ್ 05): ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಈ ಬಾರಿ ಐಪಿಎಲ್ ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದೇ ಖುಷಿಯಲ್ಲಿ ಆರ್ ಸಿಬಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮಾಡಿದೆ. ಆದ್ರೆ, ಈ ಸಂಭ್ರಮಾಚರಣೆಯಲ್ಲಿ 11 ಆರ್ ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನು ಈ ಸಂಬಂಧ ಆರ್ ಸಿಬಿ ಮ್ಯಾನೇಜ್‌ಮೆಂಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಮೊದಲು ಘಟನೆ ಸಂಬಂಧ ಯುಡಿಆರ್ ದಾಖಲಾಗಿದ್ದಕ್ಕೆ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಟೀಕೆಗಳು ವ್ಯಕ್ತವಾಗಿದ್ದವು. ಅಲ್ಲದೇ ನಿಮ್ಮ ಟಿವಿ9 ನಿರಂತರವಾಗಿ ಸುದ್ದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಆರ್‌ಸಿಬಿ ಮ್ಯಾನೇಜ್‌ಮೆಂಟ್, ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್ (RCB management), ಕೆಎಸ್‌ಸಿಎ(ಕರ್ನಾಟಕ ರಾಜ್ಯ ಕ್ರಿಕೆಟ್ ಆಸೋಸಿಯೇಷನ್) ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಬಿಎನ್‌ಎಸ್ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿದ್ದು, ಎ1 ಆರ್‌ಸಿಬಿ ಮ್ಯಾನೇಜ್‌ಮೆಂಟ್, ಎ2 ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್ ಆಗಿದ್ದರೆ ಕೆಎಸ್‌ಸಿಎ(ಕರ್ನಾಟಕ ರಾಜ್ಯ ಕ್ರಿಕೆಟ್ ಆಸೋಸಿಯೇಷನ್)ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ.
ಆರ್ ಸಿಬಿ ಸಂಭ್ರಮಾಚರಣೆ ವೇಲೆ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿರುವ ಸಂಬಂಧ ಪೊಲೀಸರು ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡಿದ್ದರು. ಯುಡಿಆರ್ ದಾಖಲಿಸಿದ್ದ ಬಗ್ಗೆ ಟಿವಿ9 ಬೆಳಗ್ಗೆಯಿಂದ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ 24 ಗಂಟೆ ಬಳಿಕ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಬೆಂಗಳೂರು ಕಾಲ್ತುಳಿತ ದುರಂತ ಸದ್ಯ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಅಲ್ಲದೇ ರಾಜ್ಯ ಸರ್ಕಾರ ಈ ಘಟನೆಯನ್ನು ಮ್ಯಾಜಿಸ್ಟ್ರೇಟ್ ತನಿಖೆಗೂ ಆದೇಶಿಸಿದೆ. ಈ ಮಧ್ಯೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಎಸ್‌ಸಿಎ ವಿರುದ್ಧ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದ್ದು, ಘಟನೆ ಸಂಬಂಧ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
Published On - 6:26 pm, Thu, 5 June 25