ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಜಾರಿಗೆ ತರಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಆದೇಶ ಹೊರಬಿದ್ದಿದೆ. ಆ ಮೂಲಕ ಕರ್ನಾಟಕ ರಾಜ್ಯದ ಪ್ರತಿ ಮನೆಯ ಯಜಮಾನಿಯ ಬ್ಯಾಂಗ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ದೊರಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಬಿಎಂ ಚಂದ್ರಶೇಖರ್ ತಾತ್ವಿಕ ಆದೇಶ ಹೊರಡಿಸಿದ್ದಾರೆ.
ಆದೇಶ ಪತ್ರದಲ್ಲಿರುವಂತೆ, ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ವಿವರವಾದ ರೂಪುರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ಆದೇಶವನ್ನು ಮೇ 20ರಂದು ನಡೆದ ಸಚಿವ ಸಂಪುಟ ತೀರ್ಮಾನದಂತೆ ಹೊರಡಿಸಲಾಗಿದೆ. ಯೋಜನೆಗೆ ಷರತ್ತುಗಳು ಹಾಗೂ ನಿಯಮಗಳು ಇವೆಯೇ ಎಂಬುದು ಮುಂದಿನ ದಿನಗಳಲ್ಲಿ ತಿಳಿದುಬರಲಿದೆ.
ಯುವ ನಿಧಿ ಯೋಜನೆ ಜಾರಿಗೆ ರಾಜ್ಯ ಸರ್ಕಾರದಿಂದ ತಾತ್ವಿಕ ಆದೇಶ ಹೊರಬಿದ್ದಿದೆ. ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3ಸಾವಿರ ರೂ. ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆ ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ದೊರಕುವ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಕೊಡಲಾಗುತ್ತದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅದೇ ರೀತಿ, ರಾಜ್ಯದ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ನೀಡುವ ಶಕ್ತಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ತಾತ್ವಿಕ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆಯ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ದೊರಕಿದೆ. ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂ., ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡುವ ಗ್ಯಾರಂಟಿ ಯೋಜನೆಗಳಾಗಿವೆ.
ಇದನ್ನೂ ಓದಿ: Siddaramaiah First Cabinet Meeting: ಐದು ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಅನುಮೋದನೆ; ಸಿದ್ದರಾಮಯ್ಯ
ಸದ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಸರ್ಕಾರದಿಂದ ಆದೇಶ ಹೊರಬಿದಿದ್ದು, ಇನ್ನು ನಾಲ್ಕು ಗ್ಯಾರಂಟಿ ಭರವಸೆಗಳು ಬಾಕಿ ಉಳಿದಿವೆ. ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಭೆ ನಡೆದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:20 pm, Sat, 20 May 23