ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ: 9ನೇ ಶೆಡ್ಯೂಲ್ಗೆ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ
ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರದ ಬಗ್ಗೆ ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ (Sc St Reservation) ಪ್ರಮಾಣ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Vandita Sharma) ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ (Ajay Kumar Bhalla) ಅವರಿಗೆ ಪತ್ರ ಬರೆದಿದ್ದಾರೆ. ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ವಿಚಾರವನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ವಿಚಾರ ಕುರಿತು ಕರ್ನಾಟಕದಿಂದ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಸಂಸತ್ನಲ್ಲಿಯೇ ಕೇಂದ್ರ ಸಚಿವರು ಹೇಳಿದ್ದರು. ಅದರಂತೆ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೆಚ್ಚಳದ ಲಾಭ ಪಡೆಯಲು ಮುಂದಾದ ಬಿಜೆಪಿ ಸರ್ಕಾರಕ್ಕೆ, ಪ್ರಸ್ತಾವನೆ ಸಲ್ಲಿಸದಿರುವುದನ್ನೇ ಮುಂದಿಟ್ಟುಕೊಂಡು ಪ್ರತಿಭಟನೆಯ ಬಿಸಿ ತಟ್ಟಿಸಲು ಕಾಂಗ್ರೆಸ್ ಪ್ಲಾನ್ ಹಾಕಿಕೊಂಡಿತ್ತು. ಇದರ ಬೆನ್ನಲ್ಲೇ ಕೇಂದ್ರಕ್ಕೆ ಪತ್ರ ರವಾನೆಯಾಗಿದೆ.
ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಈ ಕಾಯ್ದೆಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಯವರಿಗೆ ಮೀಸಲಾತಿ ಪ್ರಮಾಣ ಶೇ. 15 ರಿಂದ ಶೇ. 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆಯನ್ನು ಸಂವಿಧಾನದ 9ನೆ ಶೆಡ್ಯೂಲ್ ಗೆ ಸೇರಿಸುವ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನ ವಾಗಿದೆ ಎಂದಿದ್ದಾರೆ.
Published On - 11:35 pm, Thu, 23 March 23