ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಜೆಪಿ ರಾಜ್ಯ ಕೋರ್ ಕಮಿಟಿಯಿಂದ ಕೇಂದ್ರೀಯ ಚುನಾವಣಾ ಸಮಿತಿಗೆ 20 ಹೆಸರುಗಳು ಶಿಫಾರಸು ಮಾಡಲಾಗಿದೆ. ನಾಲ್ಕು ಸ್ಥಾನಗಳಿಗೆ 1:5 ಅನುಪಾತದಲ್ಲಿ 20 ಹೆಸರುಗಳು ಶಿಫಾರಸು ಮಾಡಲಾಗಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರು ಕೂಡಾ ಶಿಫಾರಸು ಮಾಡಲಾಗಿದೆ. ವರಿಷ್ಠರು ಯಾವುದೇ ಆಕ್ಷೇಪ ಎತ್ತದೇ ಇದ್ದರೆ ವಿಜಯೇಂದ್ರಗೆ ಟಿಕೆಟ್ ಖಚಿತ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ, ಎಂ.ಬಿ. ನಂದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ, ಸಿದ್ಧರಾಜು, ಎಸ್.ಸಿ. ಮೋರ್ಛಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಓಬಿಸಿ ಮೋರ್ಛಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರ ಬಾಬು, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ, ಹಾಲಿ ಎಂಎಲ್ಸಿ ಲಕ್ಷ್ಮಣ ಸವದಿ ಸೇರಿದಂತೆ 20 ಸಂಭಾವ್ಯ ಅಭ್ಯರ್ಥಿಗಳು ಶಿಫಾರಸಿನಲ್ಲಿದ್ದಾರೆ. ಸಾಮಾಜಿಕ ನ್ಯಾಯದಡಿ ಟಿಕೆಟ್ ಹಂಚಿಕೆ ಹೈಕಮಾಂಡ್ ಉದ್ದೇಶವಾಗಿದ್ದು, 20 ಸಂಭಾವ್ಯ ಅಭ್ಯರ್ಥಿಗಳ ಪೈಕಿ 4 ಅಭ್ಯರ್ಥಿಗಳನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ.
ವಿಧಾನ ಪರಿಷತ್ 4 ಸ್ಥಾನಗಳಿಗೆ ಜೂನ್ 15ಕ್ಕೆ ಮತದಾನ:
ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 19ರಂದು ಪರಿಷತ್ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನ. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮೇ 18ರಂದು ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜೀನಾಮೆ ನೀಡಿದ ನಂತರ ಮೇ 19ರಂದು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿಯು ದಾವೋಸ್ಗೆ ತೆರಳುವ ಮುನ್ನ ಹೊರಟ್ಟಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಹೊರಟ್ಟಿ ಅವರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಜೂನ್ ವೇಳೆಗೆ ವಿಧಾನ ಪರಿಷತ್ ಚುನಾವಣೆ (MLC Elections) ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ. ಈ ಸಂಬಂಧ ಭಾರತೀಯ ಜನತಾ ಪಕ್ಷ- ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ. ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅರುಣ್ ಶಹಾಪುರ್ ಬಿಜೆಪಿ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.