ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಎಸ್ ಟಿ ಸೋಮಶೇಖರ್
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ಈ ಬಗ್ಗೆ ಗೃಹ ಇಲಾಖೆ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ (SGRSBN) ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ಈ ಬಗ್ಗೆ ಗೃಹ ಇಲಾಖೆ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ (ST Somshekar) ಹೇಳಿದ್ದಾರೆ.
ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಎಂಎಲ್‌ಸಿ ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಐಡಿ, ಸಹಕಾರ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ (ED) ಹಗರಣದ ತನಿಖೆ ನಡೆಸಿ ಇದುವರೆಗೆ 1290 ಕೋಟಿ ರೂಪಾಯಿಗಳ ವಂಚನೆಯನ್ನು ಪತ್ತೆ ಮಾಡಿದೆ ಎಂದು ಹೇಳಿದರು. ಸಿಐಡಿ ತನಿಖೆ ನಡೆಸುತ್ತಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸುವುದು ವಿಳಂಬವಾಗಿದೆ ಎಂದು ತಿಳಿಸಿದರು.
ಬ್ಯಾಂಕ್‌ನಲ್ಲಿ ಅಡಮಾನಕ್ಕೆ ನೀಡಿದ್ದ ದಾಖಲೆಗಳು ಬೇರೆಯವರ ಪಾಲಾಗಿರುವುದರಿಂದ ಸಾಲ ಪಡೆದವರ ಆಸ್ತಿಯನ್ನು ಬ್ಯಾಂಕ್ ನಿಂದ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ ಎಂದು ಯು.ಬಿ.ವೆಂಕಟೇಶ್ ಕಳವಳ ವ್ಯಕ್ತಪಡಿಸಿದರು.
ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಆಡಳಿತ ಮಂಡಳಿ ರದ್ದುಗೊಳಿಸಿ ಆರ್‌ಬಿಐ ಸಲಹೆ ಹಾಗೂ ಹೈಕೋರ್ಟ್ ನಿರ್ದೇಶನದ ಮೇರೆಗೆ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಅಲ್ಲದೆ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 64ರ ಅನ್ವಯ ವಿಚಾರಣೆಗೆ ಆದೇಶಿಸಲಾಗಿದೆ. 2014-15 ರಿಂದ 2018-19ರವರೆಗಿನ ಲೆಕ್ಕ ಪತ್ರಗಳನ್ನು ಮರುಲೆಕ್ಕ ಪರಿಶೋಧನೆಗೆ ಆದೇಶಿಸಲಾಗಿದೆ. ಜಾರಿ ನಿರ್ದೇಶನಾಲಯ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ ಎಂದರು.
ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆಸಿದ 19 ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಸೇವೆಯಿಂದ ವಜಾಗೊಳಿಸಲಾಗಿದೆ. ಈ ಪೈಕಿ 15 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಿಐಡಿ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ ಎಂದು ಉತ್ತರಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:34 pm, Wed, 15 February 23