ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ನಾಳೆಯೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಎಂಬ ಸುದ್ದಿಯ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದಿರುವ ಅವರು, ಹೈಕಮಾಂಡ್​ ಈ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿನ ಸದ್ಯದ ಬೆಳವಣಿಗೆಗಳ ಬಗ್ಗೆ ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆದಿರೋದು ಕುತೂಹಲ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ
ರಣದೀಪ್​​ ಸುರ್ಜೇವಾಲ
Image Credit source: Tv9 Kannada
Edited By:

Updated on: May 27, 2026 | 5:58 PM

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಾತ್ರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಸಿಎಂ ಸ್ಥಾನಕ್ಕೆ ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಚರ್ಚೆ
  • ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಗರಿಗೆದರಿರುವ ರಾಜಕೀಯ ಚಟುವಟಿಕೆ
  • ಈ ನಡುವೆ ಅಚ್ಚರಿಯ ಹೇಳಿಕೆ ಕೊಟ್ಟ ರಾಜ್ಯ ಕಾಂಗ್ರೆಸ್​​ ಉಸ್ತುವಾರಿ!

ಸುರ್ಜೇವಾಲ ಹೇಳಿದ್ದೇನು?

ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆ ಮಾಡಲು ಶಾಸಕಾಂಗ ಪಕ್ಷದ ಸಭೆಯನ್ನೇ ಕರೆದಿಲ್ಲವೆಂದು ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ವಿಪಕ್ಷ ನಾಯಕರಾಗಿ ಕೆಲಸ ನಿರ್ವಹಿಸಿದ್ದ ಸಿದ್ದರಾಮಯ್ಯನವರು, 2ನೇ ಬಾರಿಗೆ ಸಿಎಂ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಹಲವು ಸಿಎಂಗಳ ಜೊತೆ ಸಚಿವರಾಗಿ ಕೆಲಸ ಮಾಡಿದ್ದು,
ಅವರು ಸಂಘಟನಾ ಚತುರರೂ ಹೌದು ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​; ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ

ಮತ್ತೊಂದೆಡೆ ಕರ್ನಾಟಕದಲ್ಲಿನ ಸದ್ಯದ ಬೆಳವಣಿಗೆಗಳ ಬಗ್ಗೆ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆದಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Published On - 5:55 pm, Wed, 27 May 26

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us