ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ವಸೂಲಿ: ನಾಲ್ವರು ಮಹಿಳೆಯರು ಸೇರಿ ಆರು ಮಂದಿ ಅರೆಸ್ಟ್!
ಮಾಧ್ಯಮ ಪ್ರತಿನಿಧಿಗಳು ಹಾಗೂ ಸಂಘಟನೆಯ ಕಾರ್ಯಕರ್ತರೆಂದು ಹೇಳಿಕೊಂಡು ವಿದ್ಯಾರಣ್ಯಪುರದ ಸ್ಪಾ ಮಾಲೀಕರಿಗೆ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 80,000 ರೂ. ನಗದು, ಏಳು ಮೊಬೈಲ್ ಫೋನ್‌ಗಳು, ಕಾರು ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮುಖ್ಯಾಂಶಗಳು
- ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಆರು ಮಂದಿ ಬಂಧನ.
- ಮಾಧ್ಯಮ ಹಾಗೂ ಸಂಘಟನೆ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಾಲ್ವರು ಮಹಿಳೆಯರು ಅರೆಸ್ಟ್.
- ಆರೋಪಿಗಳಿಂದ ನಗದು, ಕಾರು, ಬೈಕ್ ಹಾಗೂ ಏಳು ಮೊಬೈಲ್ ಫೋನ್‌ಗಳು ವಶ.
ಬೆಂಗಳೂರು, ಅಕ್ಟೋಬರ್ 18: ತಾವೇ ಸ್ವತಃ ಸಂಘಟನೆಯೊಂದರ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳೆಂದು ಹೇಳಿಕೊಂಡು, ಸ್ಪಾ ಮತ್ತು ಸಲೂನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮಾಲೀಕರಿಂದ ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡಿದ್ದ ಕುಖ್ಯಾತ ಗ್ಯಾಂಗ್ ಒಂದನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣೆಯ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಡೆದಿದ್ದೇನು?
ಅಕ್ಟೋಬರ್ 3 ರ ರಾತ್ರಿ ವಿದ್ಯಾರಣ್ಯಪುರ ಮುಖ್ಯರಸ್ತೆಯ ನಂಜಪ್ಪ ಲೇಔಟ್‌ನಲ್ಲಿರುವ ಸ್ಪಾ ಮತ್ತು ಸಲೂನ್‌ಗೆ ನುಗ್ಗಿದ ಈ ವಂಚಕರ ತಂಡ, ಸಂಸ್ಥೆಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆಯೆಂದು ಸುಳ್ಳು ಆರೋಪ ಹೊರಿಸಿ ಸಿಬ್ಬಂದಿಯನ್ನು ಬೆದರಿಸಿದೆ. ಅಲ್ಲದೆ, ಸ್ಪಾ ಕುರಿತ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಆರಂಭದಲ್ಲಿ ಐದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದುಷ್ಕರ್ಮಿಗಳು, ಕೊನೆಗೆ ಬಲವಂತವಾಗಿ ಹಣವನ್ನು ವಸೂಲಿ ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಸಾಯಿ ನಗರ ನಿವಾಸಿ ಹಾಗೂ ಸ್ಪಾ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡು ಕೆ.ಆರ್. ಸರ್ಕಲ್ ಬಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಆರೋಪಿಗಳು
ಬಂಧಿತರನ್ನು ಈರಮ್ಮ, ಸಗಾಯಿ ಮೇರಿ, ಮಮತಾ, ಪಿಯಾ, ಯೋಗಾಬು ಹಾಗೂ ಮೊಹಮ್ಮದ್ ಆಸಿಫ್ ಎಂದು ಗುರುತಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 80,000 ರೂ. ನಗದು, 7 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಮತ್ತು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂತಹ ಇತರೆ ಸುಲಿಗೆ ಪ್ರಕರಣಗಳಲ್ಲಿ ಈ ಗ್ಯಾಂಗ್ ಭಾಗಿಯಾಗಿರುವ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




