
ಬೆಂಗಳೂರು, ಜುಲೈ 17: ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಈ ಹಿಂದೆ ಲೋಕಾಯುಕ್ತ ಡಿವೈಎಸ್ಪಿಗೆ ದೂರು ನೀಡಿದ್ದ ಬಿಜೆಪಿ (BJP) ಶಾಸಕರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಈ ಹಿಂದೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲವೆಂದು ಶಾಸಕ ಸಿ.ಎನ್. ಅಶ್ವತ್ಥನಾರಾಯಣ್, ಎಸ್.ಆರ್.ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಕೋರ್ಟ್ಗೆ ಹಾಜರಾಗಿ ದೂರು ದಾಖಲಿಸಿದ್ದಾರೆ. ಇದರಿಂದಾಗಿ ಇಂಧನ ಸಚಿವ ಕೆಜೆ ಜಾರ್ಜ್ಗೆ (KJ George) ಮತ್ತೆ ಸಂಕಷ್ಟ ಎದುರಾಗಿದೆ.
ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಿಗೆ ಗುತ್ತಿಗೆ ನೀಡಲೆಂದೇ ಇತರೆ ಕಂಪೆನಿಗಳು ಟೆಂಡರ್ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣವೆಂದು ದೂರುದಾರರ ಪರ ಹಿರಿಯ ವಕೀಲ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದ್ದಾರೆ.
ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ ದೊಡ್ಡ ಟೆಂಡರ್ ಆಗಿರುವುದರಿಂದ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಹಾಗೆ ಮಾಡದೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಿ ರಾಜಶ್ರೀ ಎಲೆಕ್ಟ್ರಿಕಲ್ಸ್ ಕಂಪೆನಿಗೆ ನೀಡಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಕರೆಯಲಾಗಿದ್ದರೂ ಬೆಸ್ಕಾಂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಿರುವುದು ಸಂಪೂರ್ಣ ಕಾನೂನುಬಾಹಿರ ಹಾಗೂ ಅಕ್ರಮವಾಗಿದೆ. ಕೇಂದ್ರ ಸರ್ಕಾರದ ಆರ್‌ಡಿಎಸ್‌ಎಸ್ ಯೋಜನೆಯಡಿ 900 ರೂಪಾಯಿಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾದ ಅನಿವಾರ್ಯತೆ ತಂದೊಡ್ಡಿದ್ದಾರೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ. ತನಿಖೆ ಅನುಮತಿಗಾಗಿ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಲೋಕಾಯುಕ್ತ ಡಿವೈಎಸ್‌ಪಿ ಗೆ ದೂರು ನೀಡಿದರೂ ಎಫ್‌ಐಆರ್ ದಾಖಲಿಸಿಲ್ಲ. ಹೀಗಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಬೇಕು ಎಂದು ಬಿಜೆಪಿ ನಾಯಕರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಸ್ಮಾರ್ಟ್ ಮೀಟರ್: ಪಕ್ಕದ ರಾಜ್ಯದಲ್ಲಿ 900 ರೂ.ಇಲ್ಯಾಕೆ 10 ಸಾವಿರ: ಸರ್ಕಾರಕ್ಕೆ ಕೋರ್ಟ್ ಪ್ರಶ್ನೆ
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಂದು ಮತ್ತೆ ವಾದಮಂಡನೆ ನಡೆಯಲಿದೆ. ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವ ಬಗ್ಗೆ ಕೋರ್ಟ್ ಇಂದು ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:19 am, Thu, 17 July 25