ಸಾಮಾಜಿಕ ಜಾಲತಾಣದಲ್ಲಿ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವಂತಿಲ್ಲ, ಅದು ಮುಕ್ತ ಪರವಾನಗಿ ಅಲ್ಲ: ಕರ್ನಾಟಕ ಹೈಕೋರ್ಟ್

ಸಾಮಾಜಿಕ ಜಾಲತಾಣ ಖಾತೆ ಇದೆ ಎಂಬ ಕಾರಣಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದು ಮುಕ್ತ ಪರವಾನಗಿ ಅಲ್ಲ, ಪೋಸ್ಟ್‌ಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯೊಳಗಿರಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯಪಟ್ಟಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸುವ ಸಂದರ್ಭನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವಂತಿಲ್ಲ, ಅದು ಮುಕ್ತ ಪರವಾನಗಿ ಅಲ್ಲ: ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Image Credit source: Getty Images

Updated on: Nov 19, 2026 | 5:34 PM

ಬೆಂಗಳೂರು, ನವೆಂಬರ್​​ 19: ಸಾಮಾಜಿಕ ಜಾಲತಾಣದ ಖಾತೆ ಇದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ತಮಗೆ ಇಷ್ಟ ಬಂದ ಯಾವುದೇ ಸಂದೇಶವನ್ನು ಪೋಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಮೂಲಕ ಮಾನಹಾನಿ ಮತ್ತು ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸುವ ಸಂದರ್ಭದಲ್ಲಿ ನ್ಯಾಯಾಲಯ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

‘ಪೋಸ್ಟ್​ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯೊಳಗಿರಬೇಕು’

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಶುಭಾ ಎಂಬುವವರ ಅರ್ಜಿಯನ್ನು ವಜಾಗೊಳಿಸುವ ವೇಳೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ವ್ಯಕ್ತಿಯೊಬ್ಬರು ತಮಗೆ ಬೇಕಾದ ಯಾವುದೇ ಸಂದೇಶವನ್ನು ಪೋಸ್ಟ್ ಮಾಡಲು ಮುಕ್ತ ಪರವಾನಗಿ ಸಿಕ್ಕಿದೆ ಎಂದು ಭಾವಿಸಬಾರದು. ಪೋಸ್ಟ್ ಮಾಡುವ ಸಂದೇಶಗಳು ಸಂವಿಧಾನದ 19(1)(ಎ) ವಿಧಿಯಡಿ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿ ಹಾಗೂ ಮಿತಿಯೊಳಗೆ ಇರಬೇಕು ಎಂದು ನ್ಯಾಯಾಲಯ ಎಚ್ಚರಿಸಿದೆ.

Loading...

ಇದನ್ನೂ ಓದಿ: SIR ವೇಳೆ ತಪ್ಪು ಮಾಹಿತಿ ನೀಡಿ ಫಾರಂ 7 ಸಲ್ಲಿಕೆ ಕೇಸ್: 12 ಜನರ ವಿರುದ್ಧದ ಎಫ್‌ಐಆರ್​ಗೆ ಹೈಕೋರ್ಟ್ ತಡೆ

ಇದೇ ದಿನ ಹೊರಡಿಸಿದ ಮತ್ತೊಂದು ಪ್ರತ್ಯೇಕ ಆದೇಶದಲ್ಲಿ, ಶುಭಾ ಮತ್ತು ಮೋಹನ್ ಎಂಬವರ ವಿರುದ್ಧ ಆನ್‌ಲೈನ್‌ನಲ್ಲಿ ಮಾನಹಾನಿ ಹಾಗೂ ಕಿರುಕುಳದ ಅಭಿಯಾನ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ ಸೆಕ್ಷನ್ 353(2) ಅಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಲಯ ವಜಾಗೊಳಿಸಿದೆ. ತಮ್ಮ ವಿರುದ್ಧ ತಿರುಚಿದ ಹಾಗೂ ಸುಳ್ಳು ಮಾಹಿತಿಯುಳ್ಳ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಅಲ್ಲದೆ, ತಾವು ಕ್ರೈಸ್ತ ಸಮುದಾಯಕ್ಕೆ ಸೇರಿದವರು ಎಂಬ ಸುಳ್ಳು ಆರೋಪಗಳನ್ನು ಹರಡುವ ಮೂಲಕ ತಮ್ಮ ವಿರುದ್ಧ ದ್ವೇಷ ಹುಟ್ಟಿಸುವ ಪ್ರಯತ್ನ ಮಾಡಲಾಗಿದೆ ಎಂದು ಥಾನುಷಾ ಎಂ. ಶೆಟ್ಟಿ ಎಂಬವರು ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ದೂರುದಾರರು ಅತ್ಯಾಚಾರ ಎಸಗಿದ್ದಾರೆ, ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ, ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ, ಹಿಂದೂ ದೇವಾಲಯಗಳನ್ನು ಅವಮಾನಿಸಿದ್ದಾರೆ ಹಾಗೂ ಪೋಕ್ಸೊ ಕಾಯ್ದೆಯಡಿ ಅಪರಾಧಗಳನ್ನು ಎಸಗಿದ್ದಾರೆ ಎಂಬ ಆರೋಪಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಆರೋಪಗಳು ಪ್ರಾಥಮಿಕ ತನಿಖೆ ಮತ್ತು ವಿಚಾರಣೆಗೆ ಅರ್ಹವಾಗಿವೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us