National Anthem: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ
ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸ್ತಿಲ್ಲವೆಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಕಡ್ಡಾಯವಾಗಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಪರ ಕಾರ್ಯದರ್ಶಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಅನುದಾನಿತ ಶಾಲೆಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡಿಸಬೇಕು. ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ


ಶಾಲೆಗಳಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನು ಮೂಡಿಸಬೇಕು. ಪ್ರತಿದಿನ ಮುಂಜಾನೆಯ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಿಸುವ ಸಂಪ್ರದಾಯವು ರಾಜ್ಯದ ಎಲ್ಲಾ ಶಾಲೆಗಳಲ್ಲಿ ರೂಢಿಯಲ್ಲಿರುತ್ತದೆ. ಆದರೆ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ಹಾಡಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಬಗ್ಗೆ ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು (ಉತ್ತರ) ಹಾಗೂ ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು(ದಕ್ಷಿಣ) ರವರು ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ. ಈ ಸಂಗತಿಯನ್ನು ಖಾತ್ರಿಪಡಿಸಿಕೊಂಡಿದ್ದಾರೆ. ಹೀಗಾಗಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ.
Published On - 10:00 pm, Wed, 17 August 22




