ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರ್ಕಾರ
ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ (Government 0ffices) ಫೋಟೋ, ವಿಡಿಯೋಗೆ ನಿರ್ಬಂಧ ವಿಧಿಸಿತ್ತು. ಆದರೆ ಈಗ ಆ ಆದೇಶವನ್ನು ಸರ್ಕಾರ ಆದೇಶ ವಾಪಸ್ ಪಡೆದುಕೊಂಡಿದೆ. ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆ ರಾಜ್ಯ ಸರ್ಕಾರ ಜುಲೈ 15ರ ತಡರಾತ್ರಿ ಆದೇಶ ಹಿಂಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೊ ಹಾಗೂ ವಿಡಿಯೋ ಚಿತ್ರೀಕರಣ ನಡೆಸುವಂತಿಲ್ಲ ಎಂದು ಆಡಳಿತ ಸುಧಾರಣಾ ಇಲಾಖೆಯಿಂದ ನಿನ್ನೆ ಆದೇಶ ಹೊರಡಿಸಿತ್ತು. ಕೆಲವರು ಸರ್ಕಾರಿ ಕಚೇರಿಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು.
ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ / ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ. ಹಿಗಾಗಿ ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ / ವಿಡಿಯೋ ಮಾಡುವುದನ್ನು ನಿಷೇಧಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನೌಕರರ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರ ಹೊಸ ಆದೇಶ ಹೊರಡಿಸಿತ್ತು. ಜೊತೆಗೆ ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
Published On - 7:24 am, Sat, 16 July 22