ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹೆಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 21, 2022 | 4:21 PM

ಬೆಂಗಳೂರು: ನಗರದಲ್ಲಿ ಒಂದೇ ಕುಟುಂಬದ ಮೂವರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹೆಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಸಂತೋಷ್ ಕುಮಾರ್(54), ಆತನ ಪತ್ನಿ ಓಮನ್ ಸಂತೋಷ್(50) ಹಾಗೂ ಮಗಳು ಸನುಷಾ(17) ಆತ್ಮಹತ್ಯೆ ಮಾಡಿಕೊಂಡವರು. ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಹೆಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಮುಖಂಡನ ಕಾರು ಅಪಘಾತ

ವಿಜಯಪುರ: ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ್ ಅವರ ಕಾರು ಅಪಘಾತಗೊಂಡ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಅಪ್ಪು ಗೌಡ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅಪ್ಪುಗೌಡ ಪಾಟೀಲ್ ಸೇರಿದಂತೆ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಫೀಮು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಬೆಳಗಾವಿ: ಆಟೋನಗರದಲ್ಲಿ ಅಫೀಮು ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೋಧಪುರದ ಮೂಲದ ರೋಹಿತಾಶ್ವ ಬಿಷ್ಣೋಯಿ ಮತ್ತು ರುಕ್ಮಿಣಿ ನಗರ ನಿವಾಸಿ ರಾಜಕುಮಾರ್ ಬಿಷ್ಣೋಯಿ ಎಂಬ ಬಂಧಿತ ಆರೋಪಿಗಳಿಂದ 2.7 ಲಕ್ಷ ಮೌಲ್ಯದ 315 ಗ್ರಾಂ ಅಫೀಮು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯ ಆಟೋನಗರದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಅಫೀಮು ಮಾರಾಟ ಮಾಡುತ್ತಿದ್ದ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಶಾಲೆಗೆ ಹೋಗದ್ದಕ್ಕೆ ಹೊಡೆದ ತಾಯಿ; ಬಾಲಕ ಆತ್ಮಹತ್ಯೆ

ನೆಲಮಂಗಳ: ಶಾಲೆಗೆ ಹೋಗದ ಹಿನ್ನೆಲೆ ತಾಯಿ ಹೊಡೆದಿದ್ದಕ್ಕೆ 12 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಜಿಲ್ಲೆಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ. ಕಡಬಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಕಡಬಗೆರೆ ನಿವಾಸಿ ಮಂಜುನಾಥ್ ಮತ್ತು ಸವಿತಾ ದಂಪತಿ ಮಗ ಪೃಥ್ವಿರಾಜ್(12) ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:16 pm, Fri, 21 October 22