ವೋಟರ್ ಐಡಿ ಅಕ್ರಮ: ವಿವಿಧ ತನಿಖಾ ತಂಡಗಳಿಂದ ಬಿಬಿಎಂಪಿ ಅಧಿಕಾರಿಗಳಿಗೆ ಮಾನಸಿಕ ಹಿಂಸೆ – ನೌಕರರ ಕ್ಷೇಮಾಭಿವೃದ್ಧಿ ಸಂಘ ಆರೋಪ
Voter ID Scam: ವಿವಿಧ ತನಿಖಾ ತಂಡಗಳ ನೋಟಿಸ್ನಿಂದ ಬಿಬಿಎಂಪಿ ಅಧಿಕಾರಿಗಳಿಗೆ ಮಾನಸಿಕ ಹಿಂಸೆ ಆಗುತ್ತಿದೆ ಎಂದು ನೌಕರರ ಕ್ಷೇಮಾಭಿವೃದ್ಧಿ ಸಂಘ ಬಿಬಿಎಂಪಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರದಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆ ಅಕ್ರಮ (Benagaluru Voter ID Scam) ಪ್ರಕರಣದ ಸಲುವಾಗಿ ಬಿಬಿಎಂಪಿ (BBMP) ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ವಿವಿಧ ತನಿಖಾ ತಂಡಗಳು ನೋಟಿಸ್ ನೀಡಿವೆ. ಇದರಿಂದ ಮಾನಸಿಕ ಹಿಂಸೆ ಆಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಬಿಬಿಎಂಪಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರದಿದೆ. ಪ್ರಕರಣದ ವಿಚಾರಣೆಗಾಗಿ ಏಕಕಾಲಕ್ಕೆ ಹಾಜರಾಗುವಂತೆ ವಿವಿಧ ಠಾಣೆಗಳಿಂದ ನೋಟಿಸ್ ನೀಡಲಾಗುತ್ತಿದೆ. ಇದರಿಂದ ನಮಗೆ ತೊಂದರೆಯಾಗುತ್ತಿದೆ. ಹಾಗೇ ತನಿಖೆ ನೆಪದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಮಾನವ ಹಕ್ಕು ಉಲ್ಲಂಘನೆಯಾಗದ ರೀತಿ ಒಂದೇ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ಪತ್ರದಲ್ಲಿ ಮನಿವಿ ಮಾಡಿದ್ದಾರೆ.
ಏನಿದು ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ?
ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.
ಈ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ: ನಾಲ್ವರು ಆರ್‌ಒಗಳ ಬಂಧನ
ಬೆಂಗಳೂರು: ನಗರದಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಹಲಸೂರು ಗೇಟ್ ಠಾಣೆ ಪೊಲೀಸರು ನಾಲ್ವರು ಆರ್‌ಒಗಳ ಬಂಧಿಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಆರ್‌ಒ ವಿ.ಬಿ.ಭೀಮಾಶಂಕರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಆರ್‌ಒ ಸೊಹೇಲ್ ಅಹ್ಮದ್, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಆರ್‌ಒ ಮಹೇಶ್, ಮಹದೇವಪುರ ವಿಧಾನಸಭಾ ಕ್ಷೇತ್ರದ ಆರ್‌ಒ ಚಂದ್ರಶೇಖರ್ ಬಂಧಿತರು. ಬಿಎಲ್‌ಒ ಕಾರ್ಡ್‌ಗಳನ್ನು ಅಕ್ರಮವಾಗಿ ಮಾಡಿಕೊಟ್ಟಿದ್ದ ಆರೋಪ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) 15 ರಿಟರ್ನಿಂಗ್ ಆಫೀಸರ್ಗಳಿಗೆ (ಆರ್‌ಒ) ನೊಟೀಸ್ ಜಾರಿ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:26 pm, Sun, 27 November 22