ವೋಟರ್ ಐಡಿ ಹಗರಣ: ಚಿಲುಮೆ ಸಂಸ್ಥೆಯ ಕಿಂಗ್ ಪಿನ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯ ಅಕ್ರಮ ಪ್ರಕರಣದಲ್ಲಿ ಬಂಧಿತರಾದ 3 ಆರೋಪಿಗಳಿಗೆ ಡಿಸೆಂಬರ್ 2ರವರೆಗೆ ಪೊಲೀಸ್ ಕಸ್ಟಡಿ ಬೆಂಗಳೂರಿನ ನಾಲ್ಕನೇ ಎಸಿಎಂಎಂ ನ್ಯಾಯಾಲಯ ಹೊರಡಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ನಡೆದ ವೋಟರ್ ಐಡಿ ಪರಿಷ್ಕರಣೆಯ ಅಕ್ರಮ (VoterID list Scam) ಪ್ರಕರಣದಲ್ಲಿ ಬಂಧಿತರಾದ 3 ಆರೋಪಿಗಳನ್ನು ಡಿಸೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ನಾಲ್ಕನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದು (ನ.21) ಹಲಸೂರು ಗೇಟ್ ಠಾಣೆ ಪೊಲೀಸರು ಚಿಲುಮೆ ಸಂಸ್ಥೆಯ ಮುಖ್ಯಸ್ಥ, ಪ್ರಮುಖ ಆರೋಪಿ ರವಿಕುಮಾರ್, ಸಹೋದರ ಕೆಂಪೇಗೌಡ, ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ತೀರ್ಪು ಹೊರಡಿಸಿದೆ.
ದೂರು ನೀಡಿದ್ದ ಬಿಬಿಎಂಪಿ
ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.
ಈ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:05 pm, Mon, 21 November 22