ಬೆಂಗಳೂರು, (ಜನವರಿ 18): ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಡಿಯುವ ಸಮುದಾಯಗಳ ಸಮಸ್ಯೆ ಪರಿಹಾರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.
ಭೂ ಸ್ವಾಧೀನ, ಗೋ ಹತ್ಯೆ ನಿಷೇಧ ಕಾಯ್ದೆ, ಬಗರ್ ಹುಕುಂ, ಕಾರ್ಮಿಕರಿಗೆ 12 ಗಂಟೆಗಳ ಕೆಲಸ ಕಡ್ಡಾಯ ಕಾಯ್ದೆ ನಿಷೇಧ, ಗ್ರಾಮೀಣ ಬ್ಯಾಂಕುಗಳಲ್ಲಿ ರೈತರ ಸಾಲಕ್ಕೆ ಒಟಿಎಸ್ ವ್ಯವಸ್ಥೆ , ಫ್ರೀಡಂ ಪಾರ್ಕನ್ನು ಹೋರಾಟಗಳಿಗೆ ಮೀಸಲಿಡುವುದು ಸೇರಿದಂತೆ ಹಲವು ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಂಘದ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬು ಕುಮಾರ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಹಶೀನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಉಪಸ್ಥಿತರಿದ್ದರು.