
ಬೆಂಗಳೂರು, ನವೆಂಬರ್ 25: ಧಾರಾವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಮುಂದಿನ ಎರಡು ವಾರಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿದೆ. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ವಿಚಾರಣೆ ನಡೆಸಿ ಸೆಷನ್ಸ್ ಕೋರ್ಟ್‌ನ ಆದೇಶಕ್ಕೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡರ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ.
ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸುಪ್ರೀಂಕೋರ್ಟ್ ಸೂಚನೆ
ಜಾಮೀನು ರದ್ದಾದ ಕಾರಣ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಅಲ್ಲದೆ, ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆಗಳೂ ಹೆಚ್ಚಾಗಿವೆ. ಯಾವುದೇ ಜನಪ್ರತಿನಿಧಿಗೆ ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಿದರೆ, ಅವರು ಶಾಸಕ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಪ್ರಸ್ತುತ, ಅವರ ಜೀವಾವಧಿ ಶಿಕ್ಷೆಗೆ ನೀಡಲಾಗಿದ್ದ ತಡೆ ಈಗ ತೆರವಾಗಿದೆ. ಇದರಿಂದಾಗಿ, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಅತಂತ್ರವಾಗಿದೆ.
ಮತ್ತೊಂದೆಡೆ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ಸುಪ್ರೀಂ ಕೋರ್ಟ್ ಬಾಗಿಲು ಬಂದ್ ಆಗಿದ್ದು, ಮರುಪರಿಶೀಲನೆ ಅರ್ಜಿ ಸಲ್ಲಿಸಬಹುದಾದರೂ ಪರಿಗಣನೆ ಸಾಧ್ಯತೆ ಇಲ್ಲ. ಹೈಕೋರ್ಟ್ನಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಬಾಕಿಯಿದೆ. ಹೀಗಾಗಿ ತುರ್ತು ವಿಚಾರಣೆಗೆ ಅಲ್ಲೇ ಮನವಿ ಮಾಡಬಹುದು. ಹೈಕೋರ್ಟ್ ಶೀಘ್ರ ವಿಚಾರಣೆ ನಡೆಸಿ ತೀರ್ಪು ನೀಡಿ, ಖುಲಾಸೆಗೊಳಿಸಿದರೆ ವಿನಯ್ ಕುಲಕರ್ಣಿಗೆ ರಿಲೀಫ್ ಸಿಗಲಿದೆ. ಒಂದೊಮ್ಮೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಎತ್ತಿ ಹಿಡಿದರೆ ಸಂಕಷ್ಟ ಎದುರಾಗಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:57 am, Wed, 25 November 26