
ಬೀದರ್, ಜನವರಿ 31: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ (Bidar) ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗ್ರಾಮದಲ್ಲಿ ಆತಂಕ ಮೂಡಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟದಲ್ಲಿಅನ್ವರ್ ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ ಪರಿಜಾರ್(8), ಅಜೀಜ್(5), ಬುಶ್ರಾ(4)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮಕ್ಕಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಕಾರಣವಾದ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಸೋಕೋ (SOCO) ತಂಡವನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತೆರಳಿ ಪರಿಶೀಲನೆ ನಡೆಸಿಸಿದ್ದಾರೆ.
ಕಳೆದ ಆರು ತಿಂಗಳ ಅವಧಿಯಲ್ಲಿ ಇದೇ ಗ್ರಾಮದಲ್ಲಿ ಇದು ಎರಡನೇ ಬಾರಿ ಸಂಭವಿಸಿರುವ ಸ್ಫೋಟವಾಗಿದೆ. ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳಿಂದ ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.