
ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 06): ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ (Sringeri Assembly constituency) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), 279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಆದೇಶ ಹೊರಡಿಸಿದೆ.
ಶೃಂಗೇರಿ ಶಾಸಕರಾಗಿ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ, 279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿದ್ದು, 2 ವಾರದಲ್ಲಿ ಮರುಪರಿಶೀಲನೆ ನಡೆಸಿ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿದೆ. ಇನ್ನು ಇದೇ ವೇಳೆ ಆದೇಶಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಪರ ವಕೀಲರು ಮನವಿ ಮಾಡಿದರು. ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕಿರುವ ಕಾರಣಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಆದ್ರೆ, ಇನ್ನೊಂದೆಡೆ ಡಿ.ಎನ್.ಜೀವರಾಜ್ ಪರ ವಕೀಲೆ ವಂದನಾ.ಪಿ.ಎಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಅಂತಿಮವಾಗಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ತನ್ನದೇ ತೀರ್ಪಿಗೆ 2 ವಾರ ಮಧ್ಯಂತರ ತಡೆ ನೀಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ರಾಜೇಗೌಡ ಆಯ್ಕೆಯನ್ನು ಅಸಿಂಧಗೊಳಿಸಬೇಕು ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅವರು ಕೇವಲ 200 ಮತಗಳ ಅಂತರದಿಂದ ಗೆದ್ದಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಅಧಿಕಾರಿಗಳು ಲೋಪ ಎಸಗಿದ್ದಾರೆ. ಜಿತೆಗೆ ಎದುರಾಳಿಯು ಚುನಾವಣೆಗೆ 120 ಕೋಟಿ ರೂ. ಖರ್ಚು ಮಾಡಿದ್ದಾರೆ. ಇದಕ್ಕೆ ಪ್ರಬಲವಾದ ಸಾಂದರ್ಭಿಕ ಪುರಾವೆಗಳಿವೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಆದ್ರೆ, ಜೀವರಾಜ್ ಅವರ ಅರ್ಜಿಯನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಶಾಸಕ ರಾಜೇಗೌಡ ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್, ಅರ್ಜಿ ವಜಾಗೊಳಿಸಲು ನಿರಾಕರಿಸಿತ್ತು. ಬಳಿಕ ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಬಳಿಕ ಸುಪ್ರೀಂಕೋರ್ಟ್ ರಾಜೇಗೌಡರ ಅರ್ಜಿಯನ್ನು ವಿಲೇವಾರಿ ಮಾಡಿದ್ದು, ಈ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ಮುಂದುವರಿಸಲಿದ್ದು, ಅರ್ಜಿದಾರರು ಅಲ್ಲಿ ಆಕ್ಷೇಪಣೆ ಸಲ್ಲಿಸಲು ಅರ್ಹರು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿತ್ತು. ಆ ನಂತರ ರಾಜೇಗೌಡ ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದರು.
Published On - 3:58 pm, Mon, 6 April 26