
ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಹೀಗಾಗಿ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನೇ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ರಾಜಸ್ಥಾನದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರ ಬಿಜೆಪಿ ಶಾಸಕರಾಗಿರುವ ಸಂಜಯ್ ಉಪಾಧ್ಯಾಯ್ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು (ಜನವರಿ 20) ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿ ಹಾಗೂ ಸಹುಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ.
BJP National President Shri @NitinNabin has appointed Shri Ram Madhav as the Election In-Charge and Shri Satish Poonia and Shri Sanjay Upadhyay as the Election Co-Incharges for the upcoming Greater Bengaluru Corporation election. pic.twitter.com/pIFfe77vRT
— BJP (@BJP4India) January 20, 2026
ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಭೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿವುದಾಗಿ ಘೋಷಣೆ ಮಾಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:22 pm, Tue, 20 January 26