ಕೋರ್ಟ್​ ಮಹತ್ವದ ಆದೇಶ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

| Updated By: ರಮೇಶ್ ಬಿ. ಜವಳಗೇರಾ

Updated on: Oct 05, 2024 | 11:58 AM

ಗುತ್ತಿಗೆದಾರನಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದ ಬಿಜೆಪಿ ಶಾಸಕ ಮುನಿರತ್ನ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಎಷ್ಟು ದಿನ?

ಕೋರ್ಟ್​ ಮಹತ್ವದ ಆದೇಶ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ
ಬಿಜೆಪಿ ಶಾಸಕ ಮುನಿರತ್ನ
Follow us on

ಬೆಂಗಳೂರು, (ಅಕ್ಟೋಬರ್ 05): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು(ಅಕ್ಟೋಬರ್ 05) ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ(ಅಕ್ಟೋಬರ್ 19ರ ವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ ಎಸ್​ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್​​ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎನ್ ಮುನಿರತ್ನ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.

ಇದಕ್ಕೂ ಮೊದಲು ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಅತ್ಯಾಚಾರ ಪ್ರಕರಣದಲ್ಲಿ  ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.

Published On - 11:49 am, Sat, 5 October 24