Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ
ಲಂಚ ಪ್ರಕರಣದ ಪ್ರಮುಖ ಆರೋಪಿ, ಕಳೆದ ವಾರ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿ, ಕಳೆದ ವಾರ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ವಿರೂಪಾಕ್ಷಪ್ಪ ಅವರನ್ನು ಮಾರ್ಚ್ 28ರಂದು ನ್ಯಾಯಾಲಯವು ಲೋಕಾಯಯಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಲೋಕಾಯುಕ್ತ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಇದೇ ವೇಳೆ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಆದೇಶ ನೀಡಿದೆ. ಏಪ್ರಿಲ್ 6ರಂದು ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಜತೆಗೆ, ಅದೇ ದಿನ ಆಕ್ಷೇಪಣೆ ಅರ್ಜಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ.
ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ವಿರೂಪಾಕ್ಷಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಸಿದ್ಧತೆ ನಡೆದಿದೆ. ಈ ವೇಳೆ, ತಮಗಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ವಿರೂಪಾಕ್ಷಪ್ಪ ಅಧಿಕಾರಿಗಳ ಬಳಿ ಮಾಹಿತಿ ನೀಡಿದ್ದಾರೆ. ಈ ಮಧ್ಯೆ, ಅವರನ್ನು ಲೊಕಾಯುಕ್ತ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಲೆಗೆ ಬಿದ್ದಿದ್ದು ಹೇಗೆ? ಹೀಗಿತ್ತು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ
ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಕಳೆದ ವಾರ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಮಾಡಾಳ್ ಬಂಧನಕ್ಕೆ ಬಲೆ ಬೀಸಿದ್ದರು.
ಏನಿದು ಮಾಡಾಳ್ ಲಂಚ ಪ್ರಕರಣ?
ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು. ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:38 pm, Sat, 1 April 23