ಮಂಗಳೂರು, ಮಾರ್ಚ್ 28: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಬಿಜೆಪಿಯಿಂದ (BJP) ಕ್ಯಾಪ್ಟನ್ ಬ್ರಿಜೇಶ್ ಚೌಟಾ (Brijesh Chowta) ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಇದನ್ನೂ ಓದಿ: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಲ್ಲವ ಸಮುದಾಯದ ಪದ್ಮರಾಜ್ ರಾಮಯ್ಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್
ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಕಳೆದ 15 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಹಿಡಿತದಲ್ಲಿದೆ. ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ ಅವರು ಗೆದ್ದುಕೊಂಡುಬಂದಿದ್ದರು. ಈ ಬಾರಿ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್
ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ಭದ್ರಕೋಟೆ ಪುತ್ತೂರು ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಲೋಕಸಭೆ ಚುನಾವಣೆಯಲ್ಲೂ ಪಕ್ಷೇತರವಾಗಿ ಸ್ಪರ್ಧಿಸುವ ಘೋಷಣೆಯನ್ನು ಪುತ್ತಿಲ ಪರಿವಾರ ಘೋಷಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:03 pm, Thu, 28 March 24