ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ(Karnataka Soaps and Detergent Limited (KSDL) 20 ಕೋಟಿ ರೂ. ಅಕ್ರಮವಾಗಿರುವುದು ಬೆಳಕಿಗೆ ಬಂದಿದೆ. ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತನ್ನ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳನ್ನು ಖರೀದಿಯಲ್ಲಿ 20 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿರುವುದು ಸರ್ಕಾರದ ಡಾಕ್ಯುಮೆಂಟ್ ನಿಂದಲೇ ಬಹಿರಂಗವಾಗಿದೆ.
ಕೆಎಸ್ಡಿಎಲ್ಗೆನ ನಿರ್ದೇಶಕರಿಗೆ ಫೆ.28 ರಂದು ಪತ್ರ ಬರೆದಿದ್ದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ, 3 ವರ್ಷಗಳ ಹಿಂದೆ ಕಚ್ಚಾ ವಸ್ತುಗಳ ಖರೀದಿಯಲ್ಲಿ ನಡೆದಿದ್ದ 20 ಕೋಟಿ ರೂಪಾಯಿಗೂ ಹೆಚ್ಚಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೆಎಸ್ ಡಿಎಲ್ ಅಧ್ಯಕ್ಷ ಹಾಗೂ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಅವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಚ್ಚಾ ವಸ್ತುಗಳ ಟೆಂಡರ್ ಸಂಬಂಧ ಲಂಚ ಸ್ವೀಕರಿಸುವಾಗ ಕೆಎಸ್ಡಿಎಲ್ ಅಧ್ಯಕ್ಷ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ನನ್ನು ಲೋಕಾಯುಕ್ತ ದಾಳಿ ಮಾಡಿ ಬಂಧಿಸಿದೆ. ಮಾಡಾಳ್ ಪರವಾಗಿ ಪುತ್ರ ಲಂಚ ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತ ದಾಳಿಯಲ್ಲಿ ಮಾಡಾಳ್ ಕುಟುಂಬಕ್ಕೆ ಸೇರಿದ ಮನೆಯಲ್ಲಿ 8.23 ಕೋಟಿ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿಪಾಸ್ತಿಗಳು ಪತ್ತೆಯಾಗಿವೆ. ಇನ್ನು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ಎಲ್ಲಿಗೆ ಬಂದು ನಿಲ್ಲುತ್ತದೆ ಎಂದು ಕಾದುನೋಡಬೇಕಿದೆ.