CET ಪರೀಕ್ಷೆಯಲ್ಲಿ 51 ಪಠ್ಯೇತರ ಪ್ರಶ್ನೆಗಳು: ಅಭ್ಯರ್ಥಿಗಳಿಗೆ ನೀಡಿದ್ದು 2023ರ ಪ್ರಶ್ನೆ ಪತ್ರಿಕೆ?
ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಯಡವಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೆ ನೇರ ಹೊಣೆ ಅಂತ ಪೋಷಕರು ಆರೋಪಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 22: ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ (CET Exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರ ಈ ನಡೆ ಹಲವು ಅನುಮಾನ ಹುಟ್ಟು ಹಾಕಿದೆ. ಪ್ರಾಧಿಕಾರದವರು 2024ನೇ ಸಾಲಿಗೆ ಹೊಸದಾಗಿ ಪ್ರಶ್ನೆ ಪತ್ರಿಕೆಯನ್ನು ತಯಾರಿಸದೇ 2023ನೇ ಸಾಲಿನಲ್ಲಿ ತಯಾರಿಸಿದ್ದ ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ನೀಡಿದ್ದಾರೆ ಎಂಬ ಅನುಮಾನ ಉಪನ್ಯಾಸಕರ ವಲಯದಲ್ಲಿ ಮೂಡಿದೆ.
ಸಾಮಾನ್ಯವಾಗಿ ಪ್ರತೀ ವರ್ಷ ಪರೀಕ್ಷೆ ವೇಳೆ ಮೂರು ಸೆಟ್ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗುತ್ತದೆ. ಅದೇ ರೀತಿ 2023ನೇ ಸಾಲಿನಲ್ಲಿ ತಯಾರಿಸಿದ್ದ ಯಾವುದೋ ಒಂದು ಸೆಟ್ ಪ್ರಶ್ನೆ ಪತ್ರಿಕೆಯನ್ನೇ ಈ ಬಾರಿಯ ಪರೀಕ್ಷೆಗೂ ಪ್ರಾಧಿಕಾರ ನೀಡಿದೆ ಎಂಬ ಅನುಮಾನ ಮೂಡಿದೆ. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಡುವೆ ಉಂಟಾದ ಸಂವಹನ ಕೊರತೆಯೂ ಒಂದು ಕಾರಣವಾಗಿದೆ.
ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ಕಂಗಾಲಾದ ವಿದ್ಯಾರ್ಥಿಗಳು, ಪೋಷಕರು
ಹೌದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಡಿರುವ ಪಠ್ಯ ಪರಿಷ್ಕರಣೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಗೊತ್ತಿಲ್ಲ. ಗೊತ್ತಿಲ್ಲದೆ ಹಳೆಯ ಪಠ್ಯದ ಆಧಾರಾದ ಮೇಲೆ ಪ್ರಶ್ನೆ ಪತ್ರಿಕೆ ತೆಗೆದಿದೆ ಎನ್ನಲಾಗುತ್ತಿದೆ. ಇನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಗೊಂದಲದಲ್ಲಿ ತಮ್ಮ ತಪ್ಪಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಈ ಯಡವಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ನೇರ ಹೊಣೆ ಅಂತ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ವಿರುದ್ಧ ಪೋಷಕರು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕೆಇಎ ವಿರುದ್ಧ ಪ್ರತಿಭಟನೆಗೆ ಎಬಿವಿಪಿ ಪ್ರತಿಭಟನೆ ಮಾಡುತ್ತಿದ್ದು, ಕಾರ್ಯಕರ್ತರು ಪ್ರಾಧಿಕಾರವನ್ನು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:28 am, Mon, 22 April 24