ಚಾಮರಾಜನಗರ: ದಲಿತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ; 17 ಮಂದಿ ವಿರುದ್ಧ ಎಫ್ಐಆರ್ ದಾಖಲು
ಚಾಮರಾಜನಗರದ ಗುಂಡ್ಲುಪೇಟೆ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಬರಿ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ ಎಂಬ ಗ್ರಾಮಸ್ಥರೊಬ್ಬರ ಹೇಳೆಕೆಯನ್ನು ವಿರೋಧಿಸಿದ ಗ್ರಾಮಸ್ಥರು ಕೊಲೆ ಬೆದರಿಕೆ ಹಾಕಿದ್ದಾರೆ.

ಚಾಮರಾಜನಗರ, ಅಕ್ಟೋಬರ್ 19: ಜಿಲ್ಲೆಯ ಗುಂಡ್ಲುಪೇಟೆ (Gundlupete) ತಾಲೂಕಿನ ವೀರನಪುರ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆಯೆಂಬ ಆರೋಪದ ಹಿನ್ನೆಲೆಯಲ್ಲಿ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಗ್ರಾಮಸ್ಥ ಶಿವಕುಮಾರ್ ಹೇಳಿಕೆ ವಿರೋಧಿಸಿ ಕೊಲೆ ಬೆದರಿಕೆ
ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಗ್ರಾಮದಲ್ಲಿನ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಶಿವಕುಮಾರ್ ಎಂಬ ಗ್ರಾಮಸ್ಥರು “ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರಿ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ಬಳಿಕ ಕೆಲವರು ಶಿವಕುಮಾರನಿಗೆ ಜಾತಿ ನಿಂದನೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ನೀಡಿದ ದೂರಿನ ಆಧಾರದಲ್ಲಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ 17 ಮಂದಿ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.
ಸುಳ್ಳು ಆರೋಪ ಮಾಡಿದ್ದಾರೆಂದು ಗ್ರಾಮಸ್ಥರ ಆಕ್ರೋಶ
ಪ್ರಕರಣ ದಾಖಲಾಗುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಅವರು ಸುಳ್ಳು ದೂರು ನೀಡಿದ್ದಾರೆ, ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ವಾದಿಸಿದರು. ಪ್ರತಿಭಟನಾಕಾರರು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಇದೀಗ ಪೊಲೀಸರು ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



