ಬೆಂಗಳೂರು, ಏಪ್ರಿಲ್ 29: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (V Srinivasa Prasad) (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್.
ಶ್ರೀನಿವಾಸ ಪ್ರಸಾದ್ ಅಳಿಯಂದಿರು: ದೇವರಾಜು ಐಆರ್ಎಸ್ ಅಧಿಕಾರಿ, ಹರ್ಷವರ್ಧನ್ ನಂಜನಗೂಡು ಮಾಜಿ ಶಾಸಕ, ಡಾ.ಎನ್.ಎಸ್. ಮೋಹನ್ (ಮೂಳೆ ಮತ್ತು ಕೀಲು ತಜ್ಷ) ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮೈಸೂರಿನ ಅಶೋಕಪುರಂ ಶಾಲಾ ಆವರಣದಲ್ಲಿ ಬೆಳಗ್ಗೆ 11.30ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಸಂಜೆ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದೆವು. ವೈದ್ಯರು ಅವರನ್ನು ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನು ಅಗಲಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಿಧಿವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ಪ್ರಸಾದ್ ಹೇಳಿದರು.
ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಸ್ವಲ್ಪ ಚೇತರಿಕೆ ಕಂಡಿದ್ದರು. ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದರು. ರವಿವಾರದಿಂದ (ಏ.28) ಮಾತನಾಡಲು ಆಗುತ್ತಿರಲಿಲ್ಲ. ಈ ವೇಳೆ ಪೆನ್ನು ಪೇಪರ್ ಕೊಟ್ಟಿದ್ವಿ. ಆಗ ಪೇಪರ್ನಲ್ಲಿ coffee ಅಂತ ಬರೆದಿದ್ದರು. ಎರಡು ಗುಟುಕು ಕಾಫಿ ಕುಡಿದರು. ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧನರಾದರು ಎಂದು ತಿಳಿಸಿದರು.
ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ ಅವರು ತಮ್ಮ ಜರ್ನಿಯಿಂದಲೇ ನಿವೃತ್ತಿ ತೆಗೆದುಕೊಳ್ಳುತ್ತಾರೆ ಅಂದುಕೊಂಡಿರಲಿಲ್ಲ.ಇದು ಬಹಳ ದುಃಖಕರವಾದ ವಿಷಯ. ಅವರಿಗೆ ಹೈಲಿ ಡಯಾಬಿಟಿಕ್ ಸಮಸ್ಯೆ ಇತ್ತು. 11 ವರ್ಷದ ಹಿಂದೆ ಅವರಿಗೆ ರಿನಲ್ ಟ್ರಾನ್ಸ್ ಪ್ಲಾಂಟ್ ಆಗಿತ್ತು ಎಂದರು.
ವಿ.ಶ್ರೀನಿವಾಸಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಮೂಲತಃ ಮೈಸೂರಿನ ಅಶೋಕಪುರಂನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:17 am, Mon, 29 April 24