Bomb Thteat: ಚಾಮರಾಜನಗರ, ರಾಯಚೂರು ಡಿಸಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ
ಕರ್ನಾಟಕದಲ್ಲಿ ಇತ್ತೀಚೆಗೆ ಬಾಂಬ್ ಬೆದರಿಕೆ ಕರೆ, ಸಂದೇಶಗಳು ಹೆಚ್ಚಾಗುತ್ತಿವೆ. ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸರದಿ. ಡಿಸಿ ಕಚೇರಿಯನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯಿಂದ ಇ-ಮೇಲ್ ಸಂದೇಶ ಬಂದಿರವುದು ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೂ ಸ್ಫೋಟದ ಬೆದರಿಕೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಚಾಮರಾಜನಗರ, ಮೇ 2: ಚಾಮರಾಜನಗರ (Chamarajanagar) ಹಾಗೂ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸ್ಫೋಟಿಸುವುದಾಗಿ (Bomb Threat) ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮಧ್ಯಾಹ್ನ 3 ಗಂಟೆಯೊಳಗೆ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಬಂದ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇ-ಮೇಲ್ ಸಂದೇಶ ಬಂದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಚಾಮರಾಜನಗರ ಎಸ್ಪಿ ಕವಿತಾಗೆ ಮಾಹಿತಿ ನೀಡಿದೆ. ಸದ್ಯ ಇ-ಮೇಲ್ ಖಾತೆ ಬಗ್ಗೆ ಮಾಹಿತಿ ಪೊಲೀಸರು ಪಡೆಯುತ್ತಿದ್ದಾರೆ. ಚಾಮರಾಜನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚಾಮರಾಜನಗರ ಡಿಸಿ ಕಚೇರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಮಧ್ಯಾಹ್ನ 3 ಗಂಟೆಯೊಳಗೆ ಡಿಸಿ ಕಚೇರಿ ಖಾಲಿ ಮಾಡಬೇಕು, ಅಷ್ಟರೊಳಗೆ ಸ್ಫೋಟ ಮಾಡುತ್ತೇವೆ ಎಂದು ಸಂದೇಶದಲ್ಲಿದೆ. ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ನೌಕರರನ್ನು ಡಿಸಿ ಕಚೇರಿಯಿಂದ ಹೊರಗೆ ಕಳುಹಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ಮಾಡಲಾಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಸುತ್ತಮುತ್ತಲಿನ ಪ್ರದೇಶದ ಕಟ್ಟಡಗಳಲ್ಲೂ ತಪಾಸಣೆ ಮಾಡುತ್ತೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ತಿಳಿಸಿದ್ದಾರೆ.
ಮತ್ತೊಂದೆಡೆ, ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಅಪರಿಚಿತನಿಂದ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ತಕ್ಷಣವೇ ಪೊಲೀಸರು ಡಿಸಿ ಕಚೇರಿಗೆ ಭೇಟಿ ನೀಡಿದ್ದಾರೆ. ಸದ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ರಾಯಚೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು, ಮಾಹಿತಿ ಕಲೆ ಹಾಕಿದ್ದಾರೆ.
ರಾಯಚೂರು ಜಿಲ್ಲಾ ವರಿಷ್ಠಾಧಿಕಾರಿಗೆ ದೂರು
ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ ಪೈಪ್ ಬಾಂಬ್ ಸ್ಫೋಟಕ್ಕೆ ಗುರಿಯಾಗಲಿದೆ ಎಂದು 02-05-2025 ರಂದು ಕಾರ್ಯಾಲಯಕ್ಕೆ ಇ-ಮೇಲ್ ಸಂದೇಶ ಬಂದಿರುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಬೆದರಿಕೆ ಸಂದೇಶದ ಪ್ರತಿಯನ್ನು ಲಗತ್ತಿಸಲಾಗಿದ್ದು, ಪತ್ರದಲ್ಲಿರುವ ಅಂಶಗಳನ್ನು ಕುಲಂಕುಶವಾಗಿ ಪರಿಶೀಲಿಸಿ, ಈ ಕೂಡಲೇ ಅಗತ್ಯ ಕ್ರಮ ತಗೆದುಕೊಳ್ಳಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿಯವರು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಜಿಲ್ಲಾಧಿಕಾರಿಗಳು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕಾಲೇಜಿಗೆ ಬಾಂಬ್ ಬೆದರಿಕೆ, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್ನಲ್ಲಿಡುತ್ತೇವೆ ಎಂದ ದುಷ್ಕರ್ಮಿಗಳು
ಕೆಲವೇ ದಿನಗಳ ಹಿಂದಷ್ಟೇ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಪ್ರತಿಷ್ಠಿತ ಆಚಾರ್ಯ ಕಾಲೇಜಿಗೆ ಏಪ್ರಿಲ್ 29 ರಂದು ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದ. ಜತೆಗೆ, ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಇದೀಗ ಚಾಮರಾಜನಗರ ಹಾಗೂ ರಾಯಚೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಸಂದಶ ಬಂದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:45 am, Fri, 2 May 25