ಚಾಮರಾಜನಗರ, ಜನವರಿ 9: ಚಾಮರಾಜನಗರ ಜಿಲ್ಲೆ ಎಂದರೆ ಮೂಗು ಮುರಿಯುವರೇ ಹೆಚ್ಚು. ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವಿಚಾರವಾಗಿ ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ, ಹಾಡಿ ಜನರಿಗೆ ಮೂಲ ಸೌಕರ್ಯದ ಕುರಿತು ಪರಿಹಾರ ಸಿಗುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಹಿಂದೆ ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಮಿನಿ ಸಂಪುಟ ಸಭೆ ನಡೆದಿತ್ತು. ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಎಸ್ಎಂ ಕೃಷ್ಣ ಮಿನಿ ಸಂಪುಟ ಸಭೆ ನಡೆಸಿದ್ದರು. ಅರಣ್ಯ, ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಂಡಿದ್ದರು.
ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ 24 ಸರ್ಕಾರಿ ಶಾಲೆಗಳಿಗೆ ಬಿತ್ತು ಬೀಗ!
ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ತೊಡೆದು ಹಾಕಿದ್ದ ಸಿಎಂ ಸಿದ್ದರಾಮಯ್ಯ ಈಗ ಸಂಪುಟ ಸಭೆ ನಡೆಸಲು ಮುಂದಾಗಿದ್ದಾರೆ. ಸಂಪುಟ ಸಭೆಯಲ್ಲಿ ಸಿಎಂ ವಿಶೇಷ ಪ್ಯಾಕೇಜ್, ವಿಶೇಷ ಯೋಜನೆ ಮೂಲಕ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಳಚಲಿ ಎಂಬುದೇ ಜಿಲ್ಲೆಯ ಜನರ ಆಶಯವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ